ಅಂಕ ಪಟ್ಟಿ ಮುದ್ರಣ ಅವ್ಯವಹಾರ ಆರೋಪ ರೆಡ್ಡಿ ನಿರಾಕರಣೆ

ಬೆಂಗಳೂರು, ಡಿ. ೭- ರಾಜ್ಯದ ವಿವಿಧ ವಿಶ್ವ ವಿದ್ಯಾಲಯಗಳ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳ ಮುದ್ರಣ ಮತ್ತು ಪೂರೈಕೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ. ಈ ವಿಚಾರದಲ್ಲಿ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬವಸರಾಜು ರಾಯರೆಡ್ಡಿ ಇಂದಿಲ್ಲಿ ಸ್ಪಷ್ಟಪಡಿಸಿದರು.

ನಕಲಿ ಅಂಕಪಟ್ಟಿಗಳ ಹಾವಳಿಯನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂತಹ ಆರೋಪಗಳನ್ನು ಮಾಡಿರಬಹುದೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಂಕಪಟ್ಟಿಗಳ ವಿಚಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ವಿದ್ಯಾರ್ಥಿಗಳು ಮತ್ತು ರಾಜ್ಯದ ಬೊಕ್ಕಸಕ್ಕೆ ಧಕ್ಕೆ ಉಂಟು ಮಾಡಿದಲ್ಲಿ ತಾವು ಸಚಿವ ಸ್ಥಾನದಲ್ಲಿ ಮುಂದುವರೆಯಲು ಬಯಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಹಣ ಮಾಡಲಿಕ್ಕೆ ಭ್ರಷ್ಟಾಚಾರ ಮಾಡಲಿಕ್ಕೆ ತಾವು ರಾಜಕಾರಣಕ್ಕೆ ಬಂದಿಲ್ಲ. ಜನಸೇವೆ ಮಾಡಬೇಕೆಂಬ ಉದ್ದೇಶದಿಂದ ರಾಜಕಾರಣಕ್ಕೆ ಬಂದಿರುವುದಾಗಿ ತಿಳಿಸಿದರು.

Leave a Comment