ಅಂಧೇರಿ ಕೈಗಾರಿಕಾ ಘಟಕಕ್ಕೆ ಬೆಂಕಿ

ಮುಂಬೈ,ಸೆ.೧೨- ಅಂಧೇರಿಯ ಕೈಗಾರಿಕಾ ಘಟಕದಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂಧೇರಿಯ ಮೊರಲ್ ನಗರದ ಸೀಪ್ಸ್ ಕೈಗಾರಿಕಾ ಪ್ರದೇಶದಲ್ಲಿ ಇಂದು ೨ಗಂಟೆ ನಸುಕಿನಲ್ಲಿ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ, ನೀರಿನ ಟ್ಯಾಂಕರ್‌ಗಳು ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ಶಿವಕುಮಾರ್ ಸೂರ್ಯಕಾಂತ್ ಸತರ್ವಲ್ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟಕದ ಒಳಗೆ ಯಾರೂ ಇಲ್ಲದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment