ಅತ್ಯಾಚಾರ ಸಂತ್ರಸ್ಥೆಗೆ ನ್ಯಾಯ ರಾಹುಲ್ ಭರವಸೆ

ಜೈಪುರ, ಮೇ ೧೬- ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮಹಿಳೆಗೆ ನ್ಯಾಯ ದೊರಕಿಸಿಕೊಡಲು ಆರೋಪಿಗಳಿಗೆ ಶಿಕ್ಷೆಗೆ ಗುರಿ ಪಡಿಸುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಚಿನ್ ಪೈಲೇಟ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ಅಲ್ವಾರ್ ನ ಪಕ್ಷದ ಲೋಕಸಭಾ ಅಭ್ಯರ್ಥಿ ಜಿತೇಂದ್ರ ಸಿಂಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಲ್ವಾರ್ ನ ಸಂತ್ರಸ್ಥ ಮಹಿಳೆಯನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.

ಅತ್ಯಾಚಾರ ಪ್ರಕರಣ ರಾಜಕೀಯ ವಿಷಯವಾಗಿ ಪರಿವರ್ತನೆಯಾಗಿದೆ. ಈ ಘಟನೆ ಮತ್ತೊಬ್ಬರಿಗೆ ಎಚ್ಚರಿಕೆಯ ಗಂಟೆಯಾಗಬೇಕು. ಹೀಗಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಅಶೋಕ್ ಗೆಲ್ಲೋಟ್ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಲಕ್ಷ್ಯ ಧೋರಣೆಯಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ನಿರಂತರವಾಗಿ ನಡೆಯುತ್ತಿದೆ ಎಂದು ದೂರಿದ ಅವರು ರಾಜಕಾರಣ ಮಾಡಲು ಇಲ್ಲಿಗೆ ಬಂದಿಲ್ಲ. ಸಂತ್ರಸ್ಥೆಗೆ ನ್ಯಾಯ ದೊರಕಿಸಬೇಕು. ಹಾಗೂ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎನ್ನುವುದು ನನ್ನ ಆಗ್ರಹ ಎಂದು ಹೇಳಿದರು.

ಏಪ್ರಿಲ್ 26 ರಂದು ಪತಿಯ ಮುಂದೆಯೇ ದಲಿತ ಮಹಿಳೆಯನ್ನು ಐವರು ಯುವಕರ ತಂಡ ಸಾಮೂಹಿಕವಾಗಿ ಅತ್ಯಾಚಾರ ನಡೆಸಿತ್ತು. ಈ ವಿಷಯ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಯಿತು.

Leave a Comment