ಅನುದಾನರಹಿತ ಶಾಲೆಗಳ ಶಿಕ್ಷಕರ ಸತ್ಯಾಗ್ರಹ

ಬೆಂಗಳೂರು, ಸೆ. ೧೨- ನಗರದ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 58 ದಿನಗಳಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅನುದಾನರಹಿತ ಶಾಲೆಗಳ ಶಿಕ್ಷಕರು, ಸರ್ಕಾರ ಸರಿಯಾಗಿ ಸ್ಪಂದಿಸದ ಕಾರಣ ನಿನ್ನೆಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
1987 ರಿಂದ 1995ರ ಅವಧಿಯಲ್ಲಿ ಪ್ರಾರಂಭವಾಗಿರುವ 95 ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ತಮ್ಮನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಕಳೆದ 58 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ಅವಧಿಯಲ್ಲಿ ಎರಡು ಬಾರಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಅವರು ಭೇಟಿ ನೀಡಿ ಬೇಡಿಕೆ ಈಡೇರಿಸುವಂತೆ ಭರವಸೆ ನೀ‌ಡಿ ಹೋಗಿದ್ದಾರೆ. ಆದರೆ ಇದುವರೆಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಧರಣಿ ನಿರತರು ಆರೋಪಿಸಿದ್ದಾರೆ.
ಕರ್ನಾಟಕ ರಾಜ್ಯ ಅನುದಾನಕ್ಕೊಳಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ವರದರಾಜ ಹೊಸಪೇಟೆ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ 95 ಶಾಲೆಗಳ ನೂರಾರು ಶಿಕ್ಷಕರು ಭಾಗವಹಿಸಿದ್ದಾರೆ.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್, ಮೇಲ್ಮನೆ ಸದಸ್ಯ ಪುಟ್ಟಣ್ಣ, ಮಾಜಿ ಸಚಿವ ಶಾಸಕ ಸುರೇಶ್ ಕುಮಾರ್, ಮಹದಾಯಿ ಹೋರಾಟಗಾರರಾದ ವೀರೇಶ್ ಸೊರಬದ ಮಠ ಸೇರಿದಂತೆ ವಿವಿಧ ಮುಖಂಡರು ಹಾಗೂ ಸಂಘಸಂಸ್ಥೆ ನಾಯಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಶಿಕ್ಷಕರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
56 ದಿನಗಳ ಕಾಲ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಕರು, ಸರ್ಕಾರ ಸರಿಯಾಗಿ ಸ್ಪಂದಿಸದ ಕಾರಣ ನಿನ್ನೆಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ತಮ್ಮ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಿ ಸರ್ಕಾರ ಆದೇಶ ಹೊರಡಿಸುವವರೆಗೆ ಮುಷ್ಕರ ಕೈಬಿ‌ಡುವುದಿಲ್ಲ ಎಂದು ಪ್ರತಿಭಟನಾ ನಿರತ ಶಿಕ್ಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳು ಮಧ್ಯಸ್ಥಿಕೆ ವಹಿಸಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಶಿಕ್ಷಕರು ಮನವಿ ಮಾಡಿದ್ದಾರೆ.
ನಿನ್ನೆಯಿಂದ ಅಮರಣಾಂತ ಉಪವಾಸ ಕೈಗೊಂಡಿರುವ ಶಿಕ್ಷಕರಲ್ಲಿ ಕೆಲವರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿಸಲಾಗಿದೆ.

Leave a Comment