ಅಪ್ರಾಪ್ತ ಬಾಲಕಿಯ ಅಪಹರಿಸಿ ಲೈಂಗಿಕ ದೌರ್ಜನ್ಯ : ಆರೋಪಿಗೆ ಜೀವಾವಧಿ ಶಿಕ್ಷೆ

=

ಕಲಬುರಗಿ,ಆ.11-ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಇಲ್ಲಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.

ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಕಳೆದ 2018 ರಲ್ಲಿ 17 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ, ಮದುವೆಯಾಗುವುದಾಗಿ ನಂಬಿಸಿ ಮಾರುತಿ ತಂದೆ ಶಂಕರ ಜಾಧವ (20) ಎಂಬಾತ ಬೈಕ್ ಮೇಲೆ ಅಪಹರಿಸಿಕೊಂಡು ಕಲಬುರಗಿ, ಮುಂಬೈಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ.

ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಶಂಕರಗೌಡ ವ್ಹಿ.ಪಾಟೀಲ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಸದರಿ ಪ್ರಕರಣದ ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಪ್ಪ ಎಸ್.ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ (ಪೋಕ್ಸೋ) ಎಲ್.ವಿ.ಚಟ್ನಾಳಕರ್ ಅವರು ವಾದ ಮಂಡಿಸಿದ್ದರು.

Leave a Comment