ಆಡಳಿತದಲ್ಲಿ ಪಾದರ್ಶಕತೆ ಲೋಕಾ ಸಂಸ್ಥೆ ಉದ್ದೇಶ: ನ್ಯಾ. ವಿಶ್ವನಾಥಶೆಟ್ಟಿ

ತುಮಕೂರು, ಏ. ೨೧- ಆಡಳಿತದಲ್ಲಿ ಪಾರದರ್ಶಕತೆ ತರಬೇಕೆಂಬುದೇ ಲೋಕಾಯುಕ್ತ ಸಂಸ್ಥೆಯ ಮುಖ್ಯ ಉದ್ದೇಶ. ಆ ಮುಖೇನ ಸಂಸ್ಥೆಯನ್ನು ಸದೃಢಗೊಳಿಸಲು ಪ್ರಯತ್ನಿಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥಶೆಟ್ಟಿ ಹೇಳಿದರು.

ಇಲ್ಲಿನ ಜಿ.ಪಂ. ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ನಂತರ ವರದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆ ಸರ್ಕಾರಿ ಇಲಾಖೆಗಳ ಆಡಳಿತದಲ್ಲಿ ಪಾದರ್ಶಕತೆ ತರಬೇಕೆಂಬ ಧ್ಯೇಯ ಹೊಂದಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳು ಸಹ ಸರ್ಕಾರದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವತ್ತ ಗಮನ ಹರಿಸಬೇಕು ಎಂದರು.

ಸರ್ಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶ್ವಾಸ ಮತ್ತು ಸಾಮರಸ್ಯದಿಂದ ಕೆಲಸ ಮಾಡುವ ಮೂಲಕ ಭ್ರಷ್ಟರಿಗೆ ಶಿಕ್ಷೆ ಕೊಡಿಸಬೇಕು. ಈ ನಿಟ್ಟಿನಲ್ಲಿ ತಾವು ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು.

ಸರ್ಕಾರಿ ಇಲಾಖೆಯ ಅಧಿಕಾರಿಗಳ ಹುದ್ದೆ ದೇವರು ಕೊಟ್ಟ ವರ. ಹಾಗಾಗಿ ದೇವರು ಕೊಟ್ಟಿರುವ ವರವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು.  ಸಮಸ್ಯೆ ಹೊತ್ತು ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ವಿನಾ ಕಾರಣ ಅಲೆದಾಡಿಸದೆ ಅವರೊಂದಿಗೆ ಸೌಜನ್ಯದಿಂದ ವರ್ತಿಸಿ ಸಮಸ್ಯೆಗಳನ್ನು ಆಲಿಸಿ ಶೀಘ್ರ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಎಲ್ಲ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದರೆ ಪ್ರಯೋಜನವಿಲ್ಲ. ಭ್ರಷ್ಟರ ಮನೆಗಳ ಮೇಲೆ ಮಾತ್ರ ದಾಳಿ ಮಾಡಬೇಕು. ಇಲ್ಲದಿದ್ದರೆ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡುವ ಮನೋಭಾವನೆಯಿಂದ ಹಿಮ್ಮುಖರಾಗುತ್ತಾರೆಂಬುದರಲ್ಲಿ ಸಂದೇಹವಿಲ್ಲ. ಹಾಗೆಯೇ ತಾವು ಮಾಡುತ್ತಿರುವ ಕೆಲಸ ಪ್ರಾಮಾಣಿಕವಾಗಿರಬೇಕು. ಯಾವುದೇ ಆಸೆ-ಆಮಿಷಗಳಿಗೆ ಬಲಿಯಾಗದೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಷ್ಪಕ್ಷಪಾತವಾಗಿ ಮಾಡಿಕೊಡಬೇಕು ಎಂದರು.

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಬಹುತೇಕ ಇಲಾಖೆಯ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾವು ಅಧಿಕಾರ ವಹಿಸಿಕೊಂಡ ನಂತರ ರಾಜ್ಯದ 12 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಯಾವ್ಯಾವ ಇಲಾಖೆಯಲ್ಲಿ ಏನೇನು ಸಮಸ್ಯೆ ಇದೆ ಎಂದು ತಿಳಿದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದೇನೆ ಎಂದರು.

ಯಾವ್ಯಾವ ಇಲಾಖೆಗಳಲ್ಲಿ ಏನೇನು ಸಮಸ್ಯೆಗಳಿವೆ ಎಂಬ ಬಗ್ಗೆ ತಿಳಿದುಕೊಳ್ಳಲು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಿಇಓ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಿ, ಇರುವ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಲೋಕಾಯುಕ್ತದ ಒಂದು ಅಂಗ ಸಂಸ್ಥೆ. ಈ ಎರಡು ಸಹ ಸರ್ಕಾರದ ಸಂಸ್ಥೆಗಳೆ. ಇವೆರಡು ಸಂಸ್ಥೆಗಳು ಸಾಮರಸ್ಯದಿಂದ ಕೆಲಸ ಮಾಡುತ್ತಿವೆ ಎಂದ ಅವರು, ರಾಜ್ಯದಲ್ಲಿ ಲೋಕಾಯುಕ್ತಗೆ ಸಂಬಂಧಿಸಿದಂತೆ 6500 ಕೇಸುಗಳಿವೆ. ಈ ಕೇಸುಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳು ಚುರುಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಲೋಕಾಯುಕ್ತ ಎಡಿಜಿಪಿ ಪರಶಿವಮೂರ್ತಿ, ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಸಿಇಓ ಕೆ.ಜಿ. ಶಾಂತರಾಮ್, ಅಡಿಷನಲ್ ಎಸ್ಪಿ ಜಿ.ಬಿ. ಮಂಜುನಾಥ್, ಲೋಕಾಯುಕ್ತ ಎಸ್ಪಿ ಜಗದೀಶ್ ಉಪಸ್ಥಿತರಿದ್ದರು.

Leave a Comment