ಆರ್ ಪಿ ಐ ಧರಣಿ

(ನಮ್ಮ ಪ್ರತಿನಿಧಿಯಿಂದ)
ಬೆಂಗಳೂರು, ಜೂ. ೧೯ – ರೈತರ ಸಾಲ ಮನ್ನಾ ಮಾಡಿ ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಪುರಭವನದ ಮುಂಭಾಗ ಪಕ್ಷದ ಅಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು ರೈತರ ಸಾಲ ಮನ್ನಾ ಮಾಡಿ ಕೋಲಾರ, ಚಿಕ್ಕಬಳ್ಳಾಪುರ ಇನ್ನಿತರ ಬಯಲುಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.

ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಎಲ್ಲಾ ಬಗೆಯ ಸಾಲವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಸಾಲದ ಸುಳಿಗೆ ಸಿಲುಕಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಸಂಕಷ್ಟದಲ್ಲಿರುವ ರೈತನ ನೆರವಿಗೆ ಕೂಡಲೇ ಧಾವಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ, ಚಿಕ್ಕಬಳ್ಳಾಪುರ ಇನ್ನಿತರ ಬಯಲುಸೀಮೆ ಪ್ರದೇಶಗಳ ಜನರು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ಕೂಡಲೇ ಇಲ್ಲಿಯ ಜನರಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Leave a Comment