ಆಹಾರದಲ್ಲಿ ಏರುಪೇರು : ವಿದ್ಯಾರ್ಥಿನಿಯರು ಅಸ್ವಸ್ಥ

ಕಲಬುರ್ಗಿ,ಸೆ.7- ಆಹಾರದಲ್ಲಿ ಏರುಪೇರಾಗಿ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ.

ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ಅರ್ಪಿತಾ (17) ಮತ್ತು ನಿಖಿತಾ (17) ಎಂಬ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಅವರನ್ನು ಕಡಗಂಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ರಾತ್ರಿ ಆಹಾರ ಸೇವಿಸಿದ ನಂತರ ಈ ಇಬ್ಬರು ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಕಳೆದ ಕೆಲವು ದಿನಗಳಿಂದ ವಸತಿ ನಿಲಯದಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲ, ಕಳಪೆ ಆಹಾರ ಸೇವನೆಯಿಂದಲೇ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವುದಾಗಿ ವಸತಿ ನಿಲಯದ ಇನ್ನುಳಿದ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಸುದ್ದಿ ತಿಳಿದು ನರೋಣಾ ಠಾಣೆ ಪೊಲೀಸರು ವಸತಿ ನಿಲಯ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment