ಉತ್ತರಪ್ರದೇಶ; ರಾಜ್ಯಪಾಲರನ್ನು ಭೇಟಿಯಾದ ಅಖಿಲೇಶ್, ಕಾನೂನು ಸುವ್ಯವಸ್ಥೆಯಲ್ಲಿ ಮಧ್ಯಪ್ರವೇಶಿಸಲು ಮನವಿ

ಲಖನೌ, ಜೂನ್ 15 – ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ನೇತೃತ್ವದ ನಿಯೋಗ ಶನಿವಾರ ರಾಜ್ಯಪಾಲ ರಾಮ್ ನಾಯಕ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಗಳ ಕುರಿತು ಪರಿಶೀಲಿಸುವಂತೆ ಮನವಿ ಮಾಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿದೆ. ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯಪಾಲರಿಗೆ ವಿವರಿಸಿರುವುದಾಗಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ರಾಜ್ಯಪಾಲರೊಂದಿಗೆ 30 ನಿಮಿಷಗಳ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್, ಸಮಾಜವಾದಿ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯಪಾಲರು ಕಾನೂನು ಸುವ್ಯವಸ್ಥೆ ವಿಷಯದಲ್ಲಿ ಮಧ್ಯಪ್ರವೇಶಿಸುತ್ತಿದ್ದರು. ಆದ್ದರಿಂದ ಈಗ ಕೂಡ ಬಿಜೆಪಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ ಅಪರಾಧಿಗಳು ಭಯವಿಲ್ಲದೆ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರು ಮನಸ್ಸಿಗೆ ಬಂದ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಆಗ್ರಾವಕೀಲರ ಪರಿಷತ್ತಿನ ಅಧ್ಯಕ್ಷನನ್ನು ಅವರ ಕೊಠಡಿಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿ ಅಪರಾಧಿಗಳನ್ನು ಹತ್ಯೆ ಮಾಡಲಾಗಿದೆ. ಜನರು ವಕೀಲರ ಕೊಠಡಿ ಹಾಗೂ ಜೈಲಿನೊಳಗೆ ಶಸ್ತ್ರಾಸ್ತ್ರ ಕೊಂಡೊಯ್ಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ನೇರ ಕಾರಣ ಎಂದು ಅಖಿಲೇಶ್, ಅವರು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದರು.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್ , ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತದ ವೈಫಲ್ಯದ ಕುರಿತು ರಾಜ್ಯಪಾಲರ ತೀವ್ರ ಟೀಕೆಗೆ ಗುರಿಯಾಗಿದ್ದರು.

Leave a Comment