ಉತ್ತರಾಖಂಡ್, ಹಿಮಾಚಲದಲ್ಲಿ ಭಾರಿ ಮಳೆ ನಿರೀಕ್ಷೆ

ನವದೆಹಲಿ, ಆ. ೨೪- ಮುಂದಿನ ಎರ‌ಡು ದಿನಗಳ ಅವಧಿಯಲ್ಲಿ ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಕಂಗ್ರಾ ಜಿಲ್ಲೆಯಲ್ಲಿ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ಉತ್ತರಾಖಂಡ್‌ನಲ್ಲಿ ಭಾರಿ ಮಳೆಯಾಗುತ್ತಿದೆ. ಡೆಹರಾಡೂನ್, ಹರಿದ್ವಾರ, ನೈನಿತಾಲ್, ಉದಾಂಸಿಂಗ್ ನಗರ್ ಮತ್ತು ಚೆಂಪಾವಟ್ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಅವಧಿಯಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಎಲ್ಲ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.

ನದಿ ತೀರದ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಬಹುತೇಕ ಭಾಗಗಳಲ್ಲಿ ರಸ್ತೆ ಮತ್ತು ಸೇತುವೆಗಳು ಕುಸಿದು ಬಿದ್ದಿವೆ. ಡೆಹರಾಡೂನ್ ಮತ್ತು ಉತ್ತರಕಾಶಿ ಹಾಗೂ ಉದಾಂಸಿಂಗ್ ನಗರಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆ ಬೀಳಲಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಎದುರಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ರಾಜ್ಯಸರ್ಕಾರ ನಿರ್ದೇಶಿಸಿದೆ.

ಉದಾಂಸಿಂಗ್ ನಗರ ಜಿಲ್ಲೆಯ ಭಾಜ್‌ಪುರ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Leave a Comment