ಉಪಯೋಜನೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಡಿ.ಸಿ ಡಾ. ಎಂ.ಆರ್. ರವಿ

ಚಾಮರಾಜನಗರ, ಫೆ.14- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಖೆಗಳು ಅನುಷ್ಟಾನಗೊಳಿಸಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆ ಕಾಯ್ದೆ ಅನ್ವಯ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದೇ ಶೀಘ್ರವಾಗಿ ತಲುಪಿಸುವ ಕೆಲಸ ಮಾಡಬೇಕು. ಪ್ರತಿ ಇಲಾಖೆಯು ನಿಗದಿಪಡಿಸಿರುವ ಗುರಿಯನ್ನು ಸಾಧಿಸಬೇಕು. ಯಾವುದೇ ವಿಳಂಬಕ್ಕೆ ಅವಕಾಶವಾಗಬಾರದೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಕೆಲ ಇಲಾಖೆಗಳು ಪ್ರಗತಿಯಲ್ಲಿ ಹಿಂದೆ ಉಳಿದಿವೆ. ಇದಕ್ಕೆ ಅಸ್ಪದ ನೀಡದೇ ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳು ಚುರುಕಿನಿಂದ ಸಾಗಬೇಕು. ಅಭಿವೃದ್ಧಿ ಯೋಜನೆಗಳು ನಿಗದಿತ ವೇಳೆಗೆ ಪೂರ್ಣಗೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕೆಂದು ತಿಳಿಸಿದರು.
ಗುಣಾತ್ಮಕವಾಗಿ ಕೆಲಸಗಳನ್ನು ನಿರ್ವಹಿಸಬೇಕು. ಪರಿಶಿಷ್ಟ ಜನರ ಕಾರ್ಯಕ್ರಮಗಳ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಕೃಷಿ ಇಲಾಖೆಯ ಕಾರ್ಯಕ್ರಮಗಳು, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗಳನ್ನು ವ್ಯಾಪಕವಾಗಿ ಆಯೋಜನೆ ಮಾಡಬೇಕು. ಮೀನುಗಾರಿಕೆ, ತೋಟಗಾರಿಕೆ, ರೇಷ್ಮೆ, ಪಶುಪಾಲನೆ ಇಲಾಖೆಗಳ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ತಲುಪಬೇಕು. ಅನುಷ್ಠಾನ ಪ್ರಕ್ರಿಯೆಯಲ್ಲಿ ತಾಂತ್ರಿಕ ತೊಂದರೆಗಳಿದ್ದಲ್ಲಿ ತುರ್ತಾಗಿ ಪರಿಹರಿಸಿಕೊಳ್ಳಬೇಕು. ನಿಗದಿತ ಗುರಿ ಸಾಧಿಸದಿದ್ದಲ್ಲಿ ಕಾಯ್ದೆ ಅನುಸಾರ ಗಂಭೀರ ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು ತಿಳಿಸಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಪ್ರಭಾರ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಹೊನ್ನೇಗೌಡ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಧರಣೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಸಾದ್, ಆಹಾರ ಇಲಾಖೆ ಉಪನಿರ್ದೇಶಕರಾದ ಆರ್. ರಾಚಪ್ಪ, ರೇಷ್ಮೆ ಇಲಾಖೆ ಉಪನಿರ್ದೇಶಕರಾದ ಲಕ್ಷ್ಮೀನರಸಿಂಹಯ್ಯ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Leave a Comment