ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಅಧಿಕಾರ ;ಸುರೇಶ್ ಪ್ರಭು

ಮಂಗಳೂರು, ಏ.೧೬- ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರ ಪಡೆಯಲಿದೆ. ಬಿಜೆಪಿ ಗರಿಷ್ಠ ಸ್ಥಾನಗಳನ್ನು ಪಡೆಯಲಿದ್ದಾರೆ. ದೇಶದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.
ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ದೇಶದ ಮೂಲ ಸೌಕರ್ಯಗಳಾದ ರಸ್ತೆ, ರೈಲ್ವೆ, ವಿಮಾನ ನಿಲ್ದಾಣ ,ಬಂದರು ಅಭಿವೃದ್ಧಿಗೆ ಕಳೆದ ಐದು ವರ್ಷದಲ್ಲಿ ಮೋದಿ ನೇತೃತ್ವದ ಕೇಂದ್ರ ಸರಕಾರ ಗರಿಷ್ಠ ಅನುದಾನ ನೀಡಿದೆ. ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ೨೫ರಿಂದ ೩೦ ಹೊಸ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಿದೆ. ದೇಶದಲ್ಲಿ ೨೦೦ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಸುರೇಶ್ ಪ್ರಭು ತಿಳಿಸಿದ್ದಾರೆ. ಸ್ಟಾರ್ಟ್‌ಅಫ್ ಜನಧನ್ ಯೋಜನೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಸರಕಾರ ಹಮ್ಮಿಕೊಂಡ ಯೋಜನೆಗಳು ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವನ್ನು ಅಧಿಕಾರಕ್ಕೇರಿಸಲಿದೆ. ಸರಕು ಸಾಗಾಟ ಮತ್ತು ಸೇವಾ ವಿಭಾಗದ ಮೂಲಕ ೫೪೦ ಬಿಲಿಯನ್ ಡಾಲರ್ ಮೊತ್ತದ ರಫ್ತು ವ್ಯವಹಾರ ನಡೆದಿದೆ ಇದೊಂದು ದಾಖಲೆಯಾಗಿದೆ ಎಂದು ಸುರೇಶ್ ಪ್ರಭು ತಿಳಿಸಿದ್ದಾರೆ. ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದಾಗ ನೆರೆದ ಬೃಹತ್ ಸಂಖ್ಯೆಯ ಜನಸ್ತೋಮವನ್ನು ಗಮನಿಸಿದಾಗ ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿಯ ಕ್ರೀಯಾಶೀಲ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಆಯ್ಕೆಯಾಗಿ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಜೆಟ್ ಏರ್‌ವೇಸ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಾಲ ನೀಡಿದ ಎಸ್‌ಬಿಐ ನೇತೃತ್ವದ ಸಮೂಹಗಳ ಬ್ಯಾಂಕ್ ಆಡಳಿತದ ನಿಯಂತ್ರಣ ದಲ್ಲಿದೆ.ವಿಮಾನ ಇಂಧನದ (ಎಟಿಎಪ್ )ಬೆಲೆ ಏರಿಕೆ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ ಎಟಿಎಫ್ ಬೆಲೆಯನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಆಗ ಈ ಸಮಸ್ಯೆಗೆ ಒಂದು ಹಂತದ ಉತ್ತರ ದೊರೆಯಲಿದೆ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಸುರೇಶ್ ಪ್ರಭು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಮಾಜಿ ಉಪ ಸಭಾ ಪತಿ ಯೋಗೀಶ್ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಟಂದೂರು ಮೊದಲಾದವರು ಉಪಸ್ಥಿತರಿದ್ದರು.

 

Leave a Comment