ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅಗತ್ಯ ಸುರಕ್ಷತಾ ಕ್ರಮ: ಎಸ್.ಸುರೇಶ್ ಕುಮಾರ್

ಕೋಲಾರ, ಮೇ 30 – ಎಸ್.ಎಸ್.ಎಲ್.ಸಿ ಮಕ್ಕಳಿಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆಯನ್ನು ಜೂನ್ 25 ರಿಂದ ಜುಲೈ 4 ರವೆಗೆ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತ ಪೂರ್ವ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.
ಪರೀಕ್ಷೆಯನ್ನು 8 ಲಕ್ಷದ 48 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಮಾಸ್ಕ್ ವಿತರಿಸಲಾಗುವುದು. ಸ್ಕೌಟ್ ಮತ್ತು ಗೈಡ್ಸ್ ಅವರು ಎಲ್ಲಾ ವಿದ್ಯಾರ್ಥಿಗಳಿಗೂ ಮಾಸ್ಕ್ ಅನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಯಾವುದೇ ವಿದ್ಯಾರ್ಥಿಗೆ ಆರೋಗ್ಯ ಸಮಸ್ಯೆ ಕಂಡುಬಂದರೂ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುವುದು ಎಂದರು.
ಪರೀಕ್ಷೆ ನಡೆಸಲು ಶಿಕ್ಷಣ ತಜ್ನರಿಂದ ಅಭಿಪ್ರಾಯ ಪಡೆಯಲಾಗಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲು ತಜ್ಞರು ತಿಳಿಸಿದ್ದಾರೆ. ಹೈ ಕೋರ್ಟ್ ಸಹ ನಾವು ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಮೆಚ್ಚಿ ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿದೆ. ಕೇರಳ ರಾಜ್ಯದಲ್ಲಿ ಈಗಾಗಲೇ ಪರೀಕ್ಷೆ ನಡೆಯುತ್ತಿದೆ. ಈ ಹಿಂದೆ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತಿತ್ತು. ಈ ಸಂಖ್ಯೆಯನ್ನು 18 ರಿಂದ 20 ಕ್ಕೆ ಇಳಿಸಲಾಗುವುದು. ಇದರಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ರಾಜ್ಯದ 4500 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಹಳ್ಳಿಗಳಿಂದ ಬರುವ ಪ್ರತಿ ಮಕ್ಕಳಿಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ವಾಹನಗಳನ್ನು ಸಹ ಮಕ್ಕಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಬಳಸಿಕೊಳ್ಳಲಾಗುವುದು. ವಲಸೆ ಕಾರ್ಮಿಕರ ಮಕ್ಕಗಳಿಗೆ ಅವರು ಇರುವ ಹತ್ತಿರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಅದೇ ರೀತಿ ವಸತಿ ಶಾಲೆಗಳು ಹಾಗೂ ಹಾಸ್ಟೆಲ್‍ಗಳನ್ನು ಕ್ವಾರಂಟೇನ್ ಕೇಂದ್ರಗಳಾಗಿ ಪಡೆದುಕೊಂಡಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಿಗೂ ತಾವು ಇರುವ ಹತ್ತಿರದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಕಂಟೈನ್ ಮೆಂಟ್ ಜೋನ್‍ಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದರೆ ಬೇರೆಡೆಗೆ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಶಿಪ್ಟ್ ಮಾಡಲಾಗುವುದು. ಅದಕ್ಕಾಗಿಯೇ ಪ್ರತಿ ತಾಲ್ಲೂಕಿನಲ್ಲಿ 2 ಪರೀಕ್ಷಾ ಕೇಂದ್ರಗಳನ್ನು ಹೆಚ್ಚುವರಿಯಾಗಿ ಗುರುತಿಸಿಕೊಳ್ಳಲಾಗಿದೆ. ಚಂದನ ವಾಹಿನಿಯಲ್ಲಿ ಪ್ರಕಟವಾದ ಪುನರ್ ಮನನ ತರಗತಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಿವೆ. ರಾಜ್ಯದಲ್ಲಿ 34 ಶೈಕ್ಷಣಿಕ ಜಿಲ್ಲೆಗಳಿದ್ದೂ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಪರೀಕ್ಷಾ ಸಿದ್ಧತೆ ವ್ಯವಸ್ಥೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕೆ.ಜಿ.ಎಫ್ ಶಾಸಕರಾದ ರೂಪಕಲಾ ಶಶಿದರ್, ಜಿಲ್ಲಾ ಪಂಚಾಯತ್ ಅದ್ಯಕ್ಷರಾದ ಸಿ.ಎಸ್.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೆಚ್.ವಿ.ದರ್ಶನ್, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪೌಜಿಯಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರತ್ನಯ್ಯ ಸೇರಿದಂತೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಶಿಕ್ಷಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Share

Leave a Comment