ಕಣ್ಣುಗಳ ಆರೋಗ್ಯದ ಬಗ್ಗೆ ನಿಗಾವಹಿಸಲು ಕರೆ

ಹೊನ್ನಾಳಿ.ಜು.11; ನಮ್ಮ ದೇಹದ ಅತಿ ಸೂಕ್ಷ್ಮ ಅಂಗಗಳಾಗಿರುವ ಕಣ್ಣುಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜ್ಞಾನವಾಹಿನಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಎಚ್.ಎ. ರವಿಶಂಕರ್ ಹೇಳಿದರು.
ಚೀಲೂರು ಸಮೀಪದ ದೊಡ್ಡೇರಿ ಗ್ರಾಮದ ಜ್ಞಾನವಾಹಿನಿ ವಿದ್ಯಾಸಂಸ್ಥೆಯಲ್ಲಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಚೀಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕಣ್ಣುಗಳಲ್ಲಿ ನೀರು ಸುರಿಯುವುದು, ಕಣ್ಣು ಮಂಜಾಗುವುದು ಇತ್ಯಾದಿ ಕಣ್ಣಿನ ಅನಾರೋಗ್ಯದ ಲಕ್ಷಣಗಳು. ಇಂಥ ಲಕ್ಷಣಗಳು ಕಂಡುಬಂದ ತಕ್ಷಣ ನೇತ್ರ ತಜ್ಞರನ್ನು ಸಂಪರ್ಕಿಸಬೇಕು. ಕಣ್ಣಿನ ಪೊರೆಯ ನಿವಾರಣೆಗೆ ಶಸ್ತ್ರಚಿಕಿತ್ಸೆ ಅನಿವಾರ್ಯವಾಗುತ್ತದೆ. ಗ್ರಾಮೀಣ ಪ್ರದೇಶಗಳ ಜನತೆಗೆ ಕಣ್ಣಿನ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ಶಸ್ತ್ರ ಚಿಕಿತ್ಸೆ ಹೊರೆಯಾಗಬಾರದು ಎಂಬ ಉದ್ದೇಶದಿಂದ ಉಚಿತ ಶಿಬಿರ ಆಯೋಜಿಸಲಾಗಿದೆ. ಎಲ್ಲರೂ ಇಂಥ ಶಿಬಿರಗಳ ಪ್ರಯೋಜನ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಜ್ಞಾನವಾಹಿನಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ನಾಗರಾಜ್, ಮುಖ್ಯ ಶಿಕ್ಷಕರಾದ ಇಮ್ರಾನ್, ಅನಿತಾ, ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯರು-ಸಿಬ್ಬಂದಿ ಉಪಸ್ಥಿತರಿದ್ದರು.150 ಜನರು ನೇತ್ರ ತಪಾಸಣೆಗೆ ಒಳಪಟ್ಟರು. ಆ ಪೈಕಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದ 79 ಜನರನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Leave a Comment