ಕರ್ನಾಟಕ ಮತ್ತೆ `ಕೈ’ ವಶ: ಸಿದ್ದು ವಿಶ್ವಾಸ

ಬಳ್ಳಾರಿ, ಆ. ೧೨- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಪ್ರಧಾನಿ ನರೇಂದ್ರಮೋದಿ ಬಂದು ಪ್ರಚಾರ ಮಾಡಿದರೂ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ. 2018ರಲ್ಲೂ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಹೇಳಿದರು.

ಜಿಲ್ಲೆಯ ತೋರಣಗಲ್ಲು ಬಳಿಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾ‌‌ಡಿದ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಜನರ ಮನ, ಮನೆ ತಲುಪಿವೆ. ಇದು ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಲಿಂಗಾಯತ ಧರ್ಮಕ್ಕಾಗಿ ಮನವಿ

ಸ್ವಾಮೀಜಿಗಳ ನಿಯೋಗ ತಮ್ಮನ್ನು ಭೇಟಿ ಮಾಡಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಿದೆ. ಈ ಬಗ್ಗೆ ಇನ್ನೂ ಪರಿಶೀಲನೆ ನಡೆಯುತ್ತಿದ್ದು, ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ತಾವೇ ಕಾರಣ ಎನ್ನುವ ರೀತಿಯಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಪ್ರತ್ಯೇಕ ಧರ್ಮಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದರು.

ಮೋಡ ಬಿತ್ತನೆ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರಪೀಡಿತ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸಿದ್ಧತೆಗಳೂ ನಡೆದಿವೆ ಎಂದರು.

ಆಲಮಟ್ಟಿಗೆ ಪೂಜೆ

ಆಲಮಟ್ಟಿ ಜಲಾಶಯ ಭರ್ತಿಯಾಗಿರುವ ಹಿನ್ನಲೆಯಲ್ಲಿ ಇದೇ 18 ರಂದು ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಶಾಸಕ ತುಕಾರಾಂ ಸೇರಿದಂತೆ ಮತ್ತಿತರರಿದ್ದರು.

ಶೀಘ್ರ ಸಂಪುಟ ವಿಸ್ತರಣೆ

ರಾಜ್ಯದಲ್ಲಿ ಖಾಲಿ ಇರುವ ಮೂರು ಸಚಿವ ಸ್ಥಾನಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಖಾಲಿ ಇರುವ ಸ್ಥಾನಗಳಿಗೆ ಯಾರನ್ನು ನೇಮಕ ಮಾಡಿಕೊಳ್ಳಬೇಕು ಎಂಬ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ಶೀಘ್ರವೇ ಸಂಪುಟ ವಿಸ್ತರಿಸುವುದಾಗಿ ಹೇಳಿದರು.

ಭರವಸೆ ಹುಸಿ

ಪ್ರಧಾನಿ ನರೇಂದ್ರಮೋದಿ ಅವರು 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಅದು ಹುಸಿಯಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಪ್ರಧಾನಿಯವರದು ಬರೀ ಬಡಾಯಿ, ಸಾಧನೆ ಮಾತ್ರ ಶೂನ್ಯ, ಬಡವರು-ರೈತರು ಕಣ್ಣಿಗೆ ಕಾಣುವುದೇ ಇಲ್ಲ, ಬರೀ ಉದ್ಯಮಿಗಳಿಗೆ ಮಣೆ ಹಾಕುತ್ತಿದ್ದಾರೆ ಎಂದು ದೂರಿದರು.

Leave a Comment