ಕಾಂಗ್ರೆಸ್ ವಿರುದ್ಧ ರಾಮುಲು ವಾಗ್ದಾಳಿ

ರಾಯಚೂರು, ಫೆ ೧೯- ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಹಾಲಿ ಸಚಿವ ಆನಂದ್ ಸಿಂಗ್ ಸೇರಿದಂತೆ ಮತ್ತಿತ್ತರ ನಾಯಕರ ಪ್ರಕರಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದನ್ನೇ ಕಾಂಗ್ರೆಸ್ ನಾಯಕರು ವ್ಯವಹಾರ ಮಾಡಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಇಂದಿಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಆನಂದ್ ಸಿಂಗ್ ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ಪ್ರಾಮಾಣಿಕರಾಗಿದ್ದರು. ಆದರೆ ಬಿಜೆಪಿಗೆ ಬರುತ್ತಿದ್ದಂತೆ ಭ್ರಷ್ಟರಾಗಿದ್ದಾರೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆ ಹಾಸ್ಯಸ್ಪದ. ಬಳ್ಳಾರಿ ರಾಜಕೀಯ ನಾಯಕರ ಮರ್ಯಾದೆ ತೆಗೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಅರಣ್ಯ ಸಚಿವ ಆನಂದ್ ಸಿಂಗ್ ಪ್ರಾಮಾಣಿಕ, ಅವರು ಸಂಪುಟದಲ್ಲಿ ಸಚಿವರಾಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಸುದ್ದಿಗಾರರೊಂದಿಗೆ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕ ಎಂದು ಹೇಳಿದ ಅವರು ಸಚಿವ ಸಂಪುಟದಲ್ಲಿ ಯಾವುದೇ ಅಸಮಾಧಾನವಿಲ್ಲ. ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಶಾಸಕರು ನಡೆಸಿದ ಸಭೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಬಿಜೆಪಿ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷ ವಿಧಾನ ಸಭೆ ಸದನ ಕಲಾಪವನ್ನು ಬಹಿಷ್ಕರಿಸಿದೆ. ಆ ಪಕ್ಷಕ್ಕೆ ಸದನದ ಒಳಗೆ ಚರ್ಚೆ ನಡೆಸುವುದು ಇಷ್ಟವಿಲ್ಲ ಎಂದು ಅವರು ಹೇಳಿದರು. ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಸಂಬಂಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ ಅವರು ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ತಿಳಿಸಿದರು.

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರ ಸಮರ್ಪಕವಾಗಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಕೆಲಸ ಮಾಡಿದೆ ಎಂದು ಅವರು ಇದೇ ವೇಳೆ  ಹೇಳಿದರು.  ಶಿಶು, ಬಾಣಂತಿಯರ ಮರಣ ಪ್ರಮಾಣವನ್ನು ತಪ್ಪಿಸಲು ಪೌಷ್ಠಿಕ ಆಹಾರಕ್ಕಾಗಿ 15 ಕೋಟಿ ರೂಪಾಯಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.

Leave a Comment