ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿಯಿಂದ 20 ರಂದು ಪ್ರತಿಭಟನೆ

ಕಲಬುರಗಿ,ಫೆ.17-“ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಫೆ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವದು” ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಬಿ.ಶಾಣಪ್ಪ, ಪಕ್ಷದ ನಗರ ಅಧ್ಯಕ್ಷ ಬಿ.ಜಿ.ಪಾಟೀಲ, ಗ್ರಾಮಾಂತರ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ತಿಳಿಸಿದರು.
ಪಕ್ಷದ ಕಚೇರಿಯಲ್ಲಿಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಅಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುವದು ಎಂದು ತಿಳಿಸಿದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡ ಮೇಲೆ ಭ್ರಷ್ಟಾಚಾರ ಮುಕ್ತ, ರೈತಪರ ಮತ್ತು ಜನಪರವಾದ ಆಡಳಿತ ನೀಡುವುದಾಗಿ ವಾಗ್ಧಾನ ಮಾಡಿದ್ದರು. ಆದರೆ, ಈ ವಾಗ್ಧಾನವನ್ನು ಈಡೇರಿಸುವಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದು, ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯಲು ಅವರು ಯೋಗ್ಯರಲ್ಲ ಎಂದು ಕೆ.ಬಿ.ಶಾಣಪ್ಪ ಹರಿಹಾಯ್ದರು.
“ಸಮಾಜವಾದ ಸಿದ್ಧಾಂತದ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯನವರ ಮೇಲೆ ರಾಜಕೀಯರಹಿತ ವಿಶ್ವಾಸವಿತ್ತು. ಆದರೆ ಅವರು ಈ ವಿಶ್ವಾಸವನ್ನು ಈಗ ಉಳಿಸಿಕೊಂಡಿಲ್ಲ” ಎಂದರು.
ಬಿಜೆಪಿ ನಗರ ಅಧ್ಯಕ್ಷ ಬಿ.ಜಿ.ಪಾಟೀಲ ಮತ್ತು ಗ್ರಾಮಾಂತರ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹಿಸಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ, ಆರ್.ಅಶೋಕ ಅವರ ನೇತೃತ್ವದಲ್ಲಿ, ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದರು.
ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ರವಿಕುಮಾರ, ಮುಖಂಡರಾದ ರೇವುನಾಯಕ ಬೆಳಮಗಿ, ಶಶೀಲ ಜಿ.ನಮೋಶಿ, ಅಮರನಾಥ ಪಾಟೀಲ, ಸುಭಾಷ ಬಿರಾದಾರ, ಸಾವಿತ್ರಿ ಕುಳಗೇರಿ ಸೇರಿದಂತೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Comment