ಕಾದು ನೋಡಿ 15 ದಿನಗಳಲ್ಲಿ ರಾಜಕೀಯ ಚಿತ್ರಣ ಬದಲು

ಬೆಂಗಳೂರು, ಸೆ. ೧೧- ಮುಂದಿನ 15 ದಿನಗಳ ಒಳಗಾಗಿ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಅದಕ್ಕೆ ನಮ್ಮನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಇಂದಿಲ್ಲಿ ಹೊಸಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಮೂಗು ತೂರಿಸಿರುವುದು ಅಸಮಾಧಾನ, ಅತೃಪ್ತಿ ಉಂಟುಮಾಡಿದೆ. ಈ ಬಗ್ಗೆ ವರಿಷ್ಠರು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಇತ್ಯರ್ಥಕ್ಕೆ ಒತ್ತುನೀಡಬೇಕು. ಮುಂದೆ ಏನಾದರೂ ತೊಂದರೆಯಾದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಸಮಸ್ಯೆಗಳನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಿರಿಯ ನಾಯಕರು ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಆದರೆ ಬೆಳಗಾವಿ ವಿಷಯದಲ್ಲಿ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ. ಇಲ್ಲದಿದ್ದರೆ, ಮುಂದಿನ ಆಗುಹೋಗುಗಳಿಗೆ ನಾವು ಜವಾಬ್ದಾರರಲ್ಲ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಜಿಲ್ಲೆಯ ಅಧಿಕಾರಿಗಳ ವರ್ಗಾವಣೆ ಸೇರಿದಂತೆ, ವಿವಿಧ ವಿಷಯಗಳಲ್ಲಿ ನಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ. ಇದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಲಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ, ಸ್ವಾಭಿಮಾನಕ್ಕೆ ಧಕ್ಕೆ ಮಾಡಿಕೊಂಡು ಸುಮ್ಮನೆ ಕೂರುವುದಿಲ್ಲ ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕರು, ಬಿಜೆಪಿ ಸೇರುವಂತೆ ನನಗೆ ಯಾವುದೇ ಆಫರ್ ನೀಡಿಲ್ಲ. ಹಾಗೊಂದು ವೇಳೆ ನನಗೆ ಆಫರ್ ನೀಡಿದರೂ ನಾನು ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದಾರೆ.

Leave a Comment