ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

ಮೈಸೂರು, ಜ.11- ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಸಂಬಂಧಿದ ಅಧಿಕಾರಿಗಳಿಗೆ ಈಗಿನಿಂದಲೇ ಕಾರ್ಯೋನ್ಮುಖರಾಗಲು ನಿರ್ದೇಶನ ನೀಡುವಂತೆ ಜಿ.ಪಂ ಸದಸ್ಯ ಬೀರಿಹುಂಡಿ ಬಸವಣ್ಣ ಜಿ.ಪಂ ಅಧ್ಯಕ್ಷರಲ್ಲಿ ಮನವಿ ಮಾಡಿದರು.
ಅವರು ಇಂದು ಜಿ.ಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಕೆಡಿಪಿ ಸಭೆಯಲ್ಲಿ ಮಾತನಾಡುತ್ತಾ, ಕಳೆದ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆಗಳು ಕೈಕೊಟ್ಟಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿ ಕಂಡು ಬಂದಿದೆ. ಈ ಪರಿಸ್ಥಿತಿಯನ್ನು ಸುಧಾರಿಸಲು ಸಬಂಧಿಸಿದ ಅಧಿಕಾರಿಗಳಾರು ಮುಂದಾಗಿಲ್ಲವೆಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಬೇಸಿಗೆ ಆರಂಭವಾಗಲಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು ಇಂದಿನಿಂದಲೇ ಕಾರ್ಯೋನ್ಮುಖರಾಗಲು ಸೂಚನೆ ನೀಡುವಂತೆ ಜಿ.ಪಂ ಅಧ್ಯಕ್ಷರಲ್ಲಿ ಮನವಿ ಮಾಡಿದರು.
ಜಿಲ್ಲಾದ್ಯಂತ ಜಾನುವಾರುಗಳಿಗೆ ಮೇವು ಸರಿಯಾಗಿ ಸಿಗುತ್ತಿಲ್ಲ. ಈಗಾಗಲೇ ಜಿಲ್ಲೆಯಲ್ಲಿ ಹಲವಾರು ಮೇವು ಸಂಗ್ರಹಣ ಕೇಂದ್ರಗಳನ್ನು ಸ್ಥಾಪಿಸಿದ್ದರೂ ಅವುಗಳಲ್ಲಿ ಸಾಕಷ್ಟು ಮೇವು ದಾಸ್ತಾನು ಇಲ್ಲ. ಸಂಬಂಧಿಸಿದ ಅಧಿಕಾರಿಗಳು ಈ ವಿಷಯದ ಬಗ್ಗೆ ನಿರ್ಲಕ್ಷ್ಯ ಮನೋಭಾವ ತೋರುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಜಿ.ಪಂ ಅಧ್ಯಕ್ಷರು ಮುಂದಾಗಬೇಕೆಂದರು.
ಸರ್ಕಾರ ಬರನಿರ್ವಹಣೆಗಾಗಿ ಕೋಟ್ಯಾಂತರ ರೂ ಅನುದಾನ ನೀಡಿದೆ. ಈ ಹಣವನ್ನು ಅಧಿಕಾರಿಗಳು ಸಮರ್ಪವಾಗಿ ಬಳಸಿಕೊಂಡು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಸೇರಿದಂತೆ ಇನ್ನಿತರ ಕಾಮಗಾರಿ ಕೈಗೊಳ್ಳಬೇಕು. ವಿನಾಕಾರಣ ಸಬೂಬು ನೀಡುವ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗುವುದು. ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯ ತ್ವರಿತವಾಗಿ ಕೈಗೊಂಡರೆ ಜಾನುವಾರುಗಳಿಗೆ ನೀರು ಕುಡಿಯಲು ಅನುಕೂಲವಾಗುತ್ತದೆ. ನೀರು ಸಂಗ್ರಹವಾಗುವ ಪ್ರದೇಶದಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೃಷಿ, ಪಶುಸಂಗೋಪನೆ, ಆರೋಗ್ಯ ಸೇರಿದಂತೆ ಇನ್ನಿತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Leave a Comment