ಕೆಎನ್ಆರ್‌‌ಗೆ ಇಡಿ ನೋಟಿಸ್

ತುಮಕೂರು, ಅ. ೧- ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಕಾಂಗ್ರೆಸ್‌ನ ಮಾಜಿ ಶಾಸಕರಾಗಿರುವ ಕೆ.ಎನ್. ರಾಜಣ್ಣ ಅವರಿಗೆ ಅ. 9 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯಕ ಸೆ. 24 ರಂದು ಕೋರಿಯರ್ ಮೂಲಕ ನೋಟಿಸ್ ಜಾರಿಗೊಳಿಸಿದೆ.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರಿಗೆ ಇ.ಡಿ. ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿತ್ತು. ಈ ಬೆನ್ನಲ್ಲೇ ಲಕ್ಷ್ಮಿಹೆಬ್ಬಾಳ್ಕರ್ ಮತ್ತು ಅವರ ತಂಡದ ಮಾಲೀಕತ್ವ ಹೊಂದಿರುವ ಹರ್ಷ ಶುಗಱ್ಸ್‌ಗೆ ತುಮಕೂರಿನ ಡಿಸಿಸಿ ಬ್ಯಾಂಕ್‌ನಿಂದ 300 ಕೋಟಿ ರೂ. ಸಾಲ ನೀಡಿರುವ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಮಾಜಿ ಶಾಸಕ ಕೆ.ಎನ್. ರಾಜಣ್ಣನವರಿಗೆ ನೋಟಿಸ್ ಜಾರಿ ಮಾಡಿರಬಹುದು ಎಂದು ಹೇಳಲಾಗುತ್ತಿದೆ.

ಜಾರಿ ನಿರ್ದೇಶನಾಲಯ ಮಾಜಿ ಶಾಸಕ ಕೆ.ಎನ್. ರಾಜಣ್ಣನವರಿಗೆ ಜಾರಿ ಮಾಡಿರುವ ನೋಟಿಸ್‌ನಲ್ಲಿ ಇಂತಹದ್ದೇ ವಿಚಾರಕ್ಕೆ ನೋಟಿಸ್ ನೀಡಲಾಗಿದೆ ಎಂಬ ಯಾವುದೇ ನಿಖರ ಮಾಹಿತಿಯ ಅಂಶವನ್ನು ನಮೂದಿಸಿಲ್ಲ ಎಂದು ತಿಳಿದು ಬಂದಿದೆ.

Leave a Comment