ಕೆಐಎಡಿಬಿ ಅಧಿಕಾರಿ ಮೇಲೆ ಹಲ್ಲೆ

 

(ನಮ್ಮ ಪ್ರತಿನಿಧಿಯಿಂದ)

ಬೆಂಗಳೂರು, ಮಾ. ೨೦ – ವಾಯುವಿಹಾರಕ್ಕೆ ತೆರಳಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದ (ಕೆಐಎಡಿಬಿ) ಕೆಎಎಸ್‌ ಅಧಿಕಾರಿ ಜಗದೀಶ್ ಅವರ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು, ಹಲ್ಲೆ ನಡೆಸಿ ಪರಾರಿಯಾಗಿರುವ ದುರ್ಘಟನೆ ಜ್ಞಾನಭಾರತಿಯ ಸರ್.ಎಂ. ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ದುಷ್ಕರ್ಮಿಗಳ ಹಲ್ಲೆಯಿಂದ ಕಿಬ್ಬೊಟ್ಟೆ, ಮೊಣಕೈಗೆ ಗಾಯಗೊಂಡಿರುವ ಜಗದೀಶ್ ಅವರು ಜ್ಞಾನಭಾರತಿಯ ಪೆನೆಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಶ್ವೇಶ್ವರಯ್ಯ ಲೇಔಟ್‌ನ ಬರಗೂರು ರಾಮಚಂದ್ರಪ್ಪ ರಸ್ತೆಯಲ್ಲಿ ಜಗದೀಶ್ ಅವರು ಬೆಳಿಗ್ಗೆ 7ರ ವೇಳೆ ವಾಯು ವಿಹಾರ ಮಾಡುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಗಾಯಗೊಂಡಿದ್ದ ಜಗದೀಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಅವರ ಪತ್ನಿ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

Leave a Comment