ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಪರಂ

ಕೊರಟಗೆರೆ, ಅ. ೧೦- ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.

ನಗರದ ಜಂಪೇನಹಳ್ಳಿ ಕೆರೆ ತುಂಬಿರುವ ಹಿನ್ನೆಲೆಯಲ್ಲಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಅವರ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಹೀಗಿರುವಾಗ ಬದಲಾವಣೆ ಪ್ರಶ್ನೆ ಏಕೆ ಉದ್ಭಿಸುತ್ತದೆ ಎಂದು ಪ್ರಶ್ನಿಸಿದರು.

ನಮ್ಮ ಪಕ್ಷದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಪ್ರಸ್ತಾಪ ಇಲ್ಲವೇ ಇಲ್ಲ, ನಾನಂತೂ ಆ ಹುದ್ದೆಯ ಆಕಾಂಕ್ಷಿಯೂ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಹೈಕಮಾಂಡ್ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆ ಎಂದರು.

ಸಿದ್ದರಾಮಯ್ಯ ಅವರು ಕೂಡ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಮರ್ಥರಿದ್ದಾರೆ. ಈ ಹಿಂದೆಯೂ ಕೂಡ ಅವರು ವಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದವರು. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದವರು. ಹಾಗಾಗಿ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಈ ಸ್ಥಾನವನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದರು.

ಹೆಚ್.ಕೆ. ಪಾಟೀಲ್ ಅವರು ಹಿರಿಯ ನಾಯಕರು. ಅವರಿಗೂ ಅನುಭವವಿತ್ತು. ಹಾಗಾಗಿ ತಮಗೆ ಆ ಸ್ಥಾನ ಬೇಕು ಎಂದು ಕೇಳಿದ್ದರು. ಹಾಗೆಂದ ಮಾತ್ರಕ್ಕೆ ಅದು ಅಸಮಾಧಾನ ಎಂದು ಹೇಳುವುದು ಸರಿಯಲ್ಲ ಎಂದರು.

ನಾನು ಸಹ ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿ ಎಂದು ಬಿಂಬಿಸಲಾಗುತ್ತಿತ್ತು. ಇದೆಲ್ಲಾ ಸತ್ಯಕ್ಕೆ ದೂರವಾದ ಸಂಗತಿ. ನಾನೆಂದೂ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ ಎಂದು ಅವರು ಹೇಳಿದರು.

ಮಾಧ್ಯಮ ಸ್ವಾತಂತ್ರ್ಯ ಕಸಿಯುವ ಯತ್ನ

ವಿಧಾನಸಭೆಯ ಅಧಿವೇಶನಕ್ಕೆ ಖಾಸಗಿ ಮಾಧ್ಯಮಗಳ ಕ್ಯಾಮೆರಾಗಳಿಗೆ ನಿರ್ಬಂಧ ಹೇರುವ ಮೂಲಕ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ. ಇದರ ವಿರುದ್ಧ ನಾವು ಸದನದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಹೇಳಲಾಗುತ್ತಿದೆ. ಆದರೆ ಬೊಕ್ಕಸದಲ್ಲಿ ಸಾಕಷ್ಟು ಹಣ ಇದೆ ಎಂದ ಅವರು, ಈ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಪರಮೇಶ್ವರ್ ಸರ್ಕಾರವನ್ನು ಆಗ್ರಹಿಸಿದರು.

Leave a Comment