ಕೊರೋನಾ ನಿಯಂತ್ರಣಕ್ಕೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳ ಅಳವಡಿಕೆ ಮುಖ್ಯ: ಶೆಟ್ಟರ್

ಬೆಂಗಳೂರು ಮೇ 22-ಕೊರೋನಾ ಸೋಂಕು ಹರಡದಂತೆ ತಡೆಯಲು ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ನಗರದ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಟಯೋಟಾ ಕಿರ್ಲೋಸ್ಕರ್ ಮೋಟರ್ಸ್ ಹಾಗೂ ಹಾರೋಹಳ್ಳಿ ಕೈಗಾರಿಕಾ ಸಂಘಗಳ ಜೊತೆ ಮಾತನಾಡಿದರು. ಟಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ನಲ್ಲಿ ಕೊರೋನಾ ಮಹಾಮಾರಿ ಹರಡದಂತೆ ಕೈಗೊಂಡಿರುವ ಎಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಕೊರೋನಾ ಸೋಂಕಿನ ನಡುವೆ ಕೈಗಾರಿಕೆಗಳನ್ನು ಪ್ರಾರಂಭಿಸಲಾಗಿದ್ದು, ಈ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕರ ಆರೋಗ್ಯ ಕಾಪಾಡಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಕರೋನಾ ಮಹಾಮಾರಿ ತಡೆಗಟ್ಟಬಹುದಾಗಿದೆ ಎಂದು ಹೇಳಿದರು.
ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಕೈಗಾರಿಕೆಗಳು ಕಾರ್ಯನಿರ್ವಹಿಸಬಹುದಾಗಿದೆ. ರಾಜ್ಯ ಸರಕಾರದಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಸಹಾಯ ಒದಗಿಸಲು ನಮ್ಮ ಇಲಾಖೆ ಸಿದ್ದವಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕರ್ನಾಟಕ ಉದ್ಯೋಗ ಮಿತ್ರ ದ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಕೆಐಎಡಿಬಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಸವರಾಜೇಂದ್ರ, ಮಂತ್ರಿಗಳ ಆಪ್ತ ಕಾರ್ಯದರ್ಶಿ ಧವಳೇಶ್ವರ್ ಉಪಸ್ಥಿತರಿದ್ದರು

Leave a Comment