ಕೊಲೆ ಬೆದರಿಕೆ ಹೆಚ್‌ಡಿಕೆ ಕೆಂಡಾ ಮಂಡಲ

ಬೆಂಗಳೂರು, ಜ. ೨೫- ಸಚಿವರು ಹಾಗೂ ಬಿಜೆಪಿಯ ಕೆಲವು ನಾಯಕರು ತೇಜೋವಧೆ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಕೆಂಡಾಮಂಡಲವಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ನನ್ನ ವಂಶವಾಹಿ (ಜೀನ್) ಈ ನೆಲದ ಮಣ್ಣಿನಲ್ಲಿದೆ ಎಂದು ತಿರುಗೇಟು ನೀಡಿದ್ದಾರೆ.
ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ ನಿಮ್ಮ ಜೀನ್‌ಗಳು ಪಾಕಿಸ್ತಾನದಲ್ಲಿರಬಹುದು ಅಥವಾ ಜರ್ಮನಿಯ ನಾಜಿಯಲ್ಲಿರಬಹುದು. ಆದರೆ, ನನ್ನ ಜೀನ್ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲೆತ್ನಿಸುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು. ‘ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು’ ಎಂಬ ಕವಿವಾಣಿ ನೆನಪಿರಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ತಮ್ಮ ಕೊಲೆಗೆ ಕೈಹಾಕಿದವರು ಒಂದು ವಿಚಾರ ತಿಳಿದುಕೊಳ್ಳಿ, ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು, ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದಿತೇ? ಎಂದು ತಿರುಗೇಟು ನೀಡಿದ್ದಾರೆ.
ನಾನು ಒಕ್ಕಲಿಗರ ಪ್ರತಿನಿಧಿ, ರೈತರಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇನೆ. ನನ್ನನ್ನು ನೀವು (ಬಿಜೆಪಿ) ಕೊಲ್ಲಲಾದಿತೆ? ನನ್ನನ್ನು ಪಾಕಿಸ್ತಾನಿ ಎನ್ನುವಿರಿ, ಮುಂದೊಂದು ದಿನ ನಿಮ್ಮ ಮಾತುಗಳಿಗೆ ಪ್ರಾಯಶ್ಚಿತ ಪಡಲೆಂದೇ ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಒಕ್ಕಲಿಗರ ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂತವರ ಮೇಲೆಯೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನೂ ಈ ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿದೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ಕಿಡಿ ಕಾರಿದ್ದಾರೆ. ಸಮಾಜದ ಸ್ವಾಸ್ಥ್ಯಕ್ಕಾಗಿ ಹೋರಾಡುತ್ತಿರುವ ತಮ್ಮನ್ನು ಪಾಕಿಸ್ತಾನಿ ಎಂದು ಜರಿಯುವ ಮೂಲಕ ಬಿಜೆಪಿ ಅಪಮಾನಿಸುತ್ತಿದೆ . ನನ್ನನ್ನು ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ಧಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಅವರು ಆರೋಪಿಸಿದ್ದಾರೆ.

ಒಕ್ಕಲಿಗರ ವಿರುದ್ಧ ದೌರ್ಜನ್ಯ
ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೆ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು ಈ ಹಿಂದೆ ನಡೆದ ತಂತ್ರಗಳು. ಆದರೆ, ಈಗ ಕೊಲ್ಲುವ ಸಂಚು ಹಾಕಿ ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ದೂರಿದ್ದಾರೆ.

Leave a Comment