ಗೆಲುವಿಗಾಗಿ ಬಿಜೆಪಿ ಅಧಿಕಾರ ದುರುಪಯೋಗ: ಹೆಚ್‌ಡಿಕೆ

ಮೈಸೂರು, ನ. ೨೧- ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮತ್ತು ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ಜಾತಿಯ ಮೂಲಕ ಚುನಾವಣೆಯಲ್ಲಿ ಗೆಲ್ಲುವ ತಂತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹಿರೇಕೆರೂರಿನ ಜೆಡಿಎಸ್ ಅಭ್ಯರ್ಥಿಯಾಗಿದ್ದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಯವರ ನಾಮಪತ್ರ ಹಿಂಪಡೆಯಲು ರಂಭಾಪುರಶ್ರೀಗಳು ಯಡಿಯೂರಪ್ಪ ಪರ ಸಂದಾನ ನಡೆಸಿದ್ದಾರೆ. ಇದು ತಮಗೆ ತಿಳಿದಿಲ್ಲ ಸಂಗತಿಯೇ ಎಂದು ಪ್ರಶ್ನಿಸಿದರು.

ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ಅವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನಿಂದ ಸ್ಪರ್ಧಿಸುತ್ತೇನೆ ಎಂದು ಮುಂದೆ ಬಂದ ಹಿನ್ನೆಲೆಯಲ್ಲಿ ಸ್ವಾಮೀಜಿಯವರಿಗೆ ಟಿಕೆಟ್ ನೀಡಲಾಗಿತ್ತು. ಈಗ ಹಲವು ಸ್ವಾಮೀಜಿಗಳು ಮಧ್ಯ ಪ್ರವೇಶಿಸಿ ಅವರ ನಾಮಪತ್ರವನ್ನು ಹಿಂಪಡೆಯುವಂತೆ ಮಾಡಿದ್ದಾರೆ ಎಂದು ಹೇಳಿದರು.

ಡಿ. 9ರ ತನಕ ಮೈತ್ರಿಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಯಡಿಯೂರಪ್ಪರವರೇ 8 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಅವರು ಗೆಲ್ಲಲಿ ಎಂದು ತಿಳಿಸಿದರು. ಚುನಾವಣೆಗೆ ಸ್ಪರ್ಧಿಸಿರುವ ಅನರ್ಹ ಶಾಸಕರನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ. ಪಕ್ಷಾಂತರ ನಿಷೇಧ ಕಾಯ್ದೆ ಇತ್ತೀಚಿನ ದಿನಗಳಲ್ಲಿ ಹಲ್ಲಿಲ್ಲದ ಹಾವಿನಂತಾಗಿದೆ ಎಂದರು.
ಹುಣಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮಾಜಿ ಸಚಿವ ಜಿ.ಟಿ ದೇವೇಗೌಡ ಬೆಂಬಲ ಕೊಡುವುದು ಬಿಡುವುದು ಅವರಿಗೇ ಬಿಟ್ಟದ್ದು ಎಂದು ಹೇಳಿದರು.

Leave a Comment