ಚಿರತೆಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಪ್ರತಿಭಟನೆ

ತುಮಕೂರು, ಜ. ೧೪- ಜಿಲ್ಲೆಯಲ್ಲಿ ಹೆಚ್ಚಾಗಿರುವ ಚಿರತೆ ಹಾವಳಿಯನ್ನು ನಿಯಂತ್ರಿಸುವಂತೆ ಹಾಗೂ ಚಿರತೆ ದಾಳಿಗೆ ಒಳಗಾಗಿ ಮೃತಪಟ್ಟ ಕುಟುಂಬಗಳಿಗೆ ಶೀಘ್ರ ಪರಿಹಾರ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಕರವೇ ಕಾರ್ಯರ್ತರು ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಚಿರತೆ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಅಮಾಯಕ ಜನರ ಪ್ರಾಣದ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಗ್ರಾಮಾಂತರ, ಗುಬ್ಬಿ, ಕುಣಿಗಲ್ ತಾಲ್ಲೂಕುಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಈವರೆವಿಗೆ ಚಿರತೆ ದಾಳಿಯಿಂದ ಮೂರು ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಹಲವು ಪ್ರಾಣಿಗಳು ಸಹ ಜೀವತೆತ್ತಿವೆ. ಇಷ್ಟಾದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಚಿರತೆಗಳ ಹಾವಳಿಯಿಂದ ಜನ-ಜಾನುವಾರುಗಳಿಗೆ ಅಪಾರ ನಷ್ಟ, ಸಾವು-ನೋವುಗಳು ಸಂಭವಿಸಿವೆ. ಆದ್ದರಿಂದ ತುಮಕೂರು ಗ್ರಾಮಾಂತರ, ಗುಬ್ಬಿ, ಕುಣಿಗಲ್ ತಾಲ್ಲೂಕು ವ್ಯಾಪ್ತಿಯಲ್ಲಿರುವ ಸುಮಾರು 12ಕ್ಕೂ ಅಧಿಕ ಚಿರತೆಗಳನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಅಲ್ಲದೆ ಈ ಬಗ್ಗೆ ನಿಖರವಾದ ಮಾಹಿತಿಯೂ ಸಹ ಈ ಇಲಾಖೆಯಲ್ಲಿ ಇಲ್ಲದಾಗಿದೆ ಎಂದು ಆರೋಪಿಸಿದರು.

ಈ ಕೂಡಲೇ ಚಿರತೆ ಸಂಚರಿಸುವ ಪ್ರದೇಶಗಳನ್ನು ಗುರುತಿಸಿ ಬೋನಿನ ವ್ಯವಸ್ಥೆಯನ್ನು ಮಾಡಬೇಕಾಗಿದೆ. ಸಂಬಂಧಪಟ್ಟವರು ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈಗಾಗಲೇ ಚಿರತೆ ದಾಳಿಯಿಂದ ಮೂರು ಮಂದಿ ಸಾವನ್ನಪ್ಪಿದ್ದಾರೆ. ಈ ಮೃತರ ಕುಟುಂಬಗಳಿಗೆ ಅರಣ್ಯ ಇಲಾಖೆ ವತಿಯಿಂದ ಶೀಘ್ರ ಪರಿಹಾರ ಮತ್ತು ಪಿಂಚಣಿ ನೀಡಬೇಕು. ಅದರಲ್ಲೂ ಮಣಿಕುಪ್ಪೆ ಗ್ರಾಮದ ಹಸುಗೂಸು ಸಮರ್ಥಗೌಡ ಎಂಬ ಬಾಲಕನ ಕುಟುಂಬಕ್ಕೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಎನ್. ಮಂಜುನಾಥಗೌಡ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

Leave a Comment