ಜಿಲ್ಲೆಯಲ್ಲಿ ಬಿಜೆಪಿ-ಜೆಡಿಎಸ್ ಸಮಬಲ, ಕಾಂಗ್ರೆಸ್‌ಗೆ ಮುಖಭಂಗ

ತುಮಕೂರು, ಮೇ ೧೬- ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಅಖಾಡದಲ್ಲಿದ್ದ 141 ಅಭ್ಯರ್ಥಿಗಳ ಪೈಕಿ ಬಿಜೆಪಿ ಮತ್ತು ಜೆಡಿಎಸ್ ತಲಾ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸಮಬಲ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಪಕ್ಷ 3 ಸ್ಥಾನವನ್ನು ಪಡೆಯುವ ಮೂಲಕ ಮುಖಭಂಗ ಅನುಭವಿಸಿದೆ.

ಜಿಲ್ಲೆಯ ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ತುಮಕೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ, ತುಮಕೂರು ಗ್ರಾಮಾಂತರ, ಗುಬ್ಬಿ, ಮಧುಗಿರಿ, ಸಿರಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹಾಗೂ ಕೊರಟಗೆರೆ, ಕುಣಿಗಲ್ ಮತ್ತು ಪಾವಗಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯದ ನಗೆ ಬೀರಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಕನಸು ಹೊಂದಲಾಗಿತ್ತು. ಆದರೆ ಕಾಂಗ್ರೆಸ್ ನಾಯಕರ ಕನಸು ಕೇವಲ 3 ಸ್ಥಾನಗಳಿಗೆ ಮಾತ್ರ ಸೀಮಿತವಾಗಿದ್ದು, ರಾಜ್ಯದಲ್ಲಿ 5 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷವನ್ನು ವಿರೋಧ ಪಕ್ಷದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹಿಂದಿಕ್ಕಿ ಸಮಬಲ ಕಾಯ್ದುಕೊಳ್ಳುವಲ್ಲಿ ಯಶ ಕಂಡಿವೆ.

ಕಳೆದ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿ ತಮ್ಮ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಈ ಬಾರಿ 81598 ಮತಗಳನ್ನು ಪಡೆಯುವ ಮೂಲಕ ಪ್ರತಿಸ್ಪರ್ಧಿ ಜೆಡಿಎಸ್‌ನ ಪಿ.ಆರ್. ಸುಧಾಕರಲಾಲ್ (73979) ರವರನ್ನು 7619 ಮತಗಳ ಅಂತರಿಂದ ಪರಾಭವಗೊಳಿಸಿ ಗೆಲುವಿನ ನಗೆ ಬೀರಿದ್ದಾರೆ.

ಪಾವಗಡ ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಪ್ಪ ಅವರ ಗೆಲುವು ರೋಚಕವಾಗಿದ್ದು, ಕೊನೆ ಕ್ಷಣದವರೆಗೂ 2ನೇ ಸ್ಥಾನದಲ್ಲಿದ್ದವರು ಕೊನೆ ಸುತ್ತಿನಲ್ಲಿ ದಿಢೀರನೆ ಜಯಗಳಿಸುವ ಮೂಲಕ ಜಿಲ್ಲೆಯ ಜನರನ್ನು ಅಚ್ಚರಿಪಡಿಸಿದ್ದಾರೆ.

ವೆಂಕಟರಮಣಪ್ಪನವರು 72974 ಮತಗಳನ್ನು ಪಡೆದು ಗೆಲುವು ಸಾಧಿಸುವ ಮೂಲಕ ಪ್ರತಿ ಸ್ಪರ್ಧಿ ಜೆಡಿಎಸ್‌ನ ಕೆ.ಎಂ. ತಿಮ್ಮರಾಯಪ್ಪ (72565)ರವರನ್ನು 409 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ರಂಗನಾಥ್ 58697 ಮತ ಗಳಿಸಿ ಗೆಲುವು ಸಾಧಿಸಿದರೆ, ಬಿಜೆಪಿ ಅಭ್ಯರ್ಥಿ ಡಿ. ಕೃಷ್ಣಕುಮಾರ್ ಅವರು 53097 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಇನ್ನು ಶಾಸಕರಾಗಿದ್ದ ಜೆಡಿಎಸ್ ಅಭ್ಯರ್ಥಿ ಡಿ. ನಾಗರಾಜಯ್ಯ ಅವರು 44476 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳಲ್ಪಟ್ಟಿದ್ದಾರೆ.

ಕಳೆದ ಬಾರಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಏಕಚಕ್ರಾಧಿತ್ಯನಾಗಿ ಜಯಗಳಿಸಿದ್ದ ತುಮಕೂರು ಗ್ರಾಮಾಂತರ ವಿಧಾನಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಬಿ. ಸುರೇಶ್‌ಗೌ‌ಡ ಅವರು 77100 ಮತಗಳನ್ನು ಪಡೆದು ಸೋಲನುಭವಿಸಿದ್ದರೆ, ಕಳೆದ ಬಾರಿ ಸೋಲನುಭವಿಸಿದ್ದ ಜೆಡಿಎಸ್‌ನ ಡಿ.ಸಿ. ಗೌರಿಶಂಕರ್ ಅವರು 82740 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಆರ್. ಶ್ರೀನಿವಾಸ್ ಅವರು 55572 ಮತಗಳನ್ನು ಪಡೆದು ಗೆಲುವು ಸಾಧಿಸುವ ಮೂಲಕ ಪ್ರತಿಸ್ಪರ್ಧಿ ಬಿಜೆಪಿಯ ಜಿ.ಎನ್. ಬೆಟ್ಟಸ್ವಾಮಿ (46491) ಅವರನ್ನು 9081 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.

ಮಧುಗಿರಿ ಕ್ಷೇತ್ರದಲ್ಲಿ ಬಿಜೆಪಿಯ ಎಂ.ವಿ. ವೀರಭದ್ರಯ್ಯ ಅವರು 88521 ಮತಗಳು ಪಡೆದು ವಿಜಯಶಾಲಿಯಾದರೆ, ಕಾಂಗ್ರೆಸ್‌ನ ಕೆ.ಎನ್. ರಾಜಣ್ಣ ಅವರು 69947 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.

ಈ ಕ್ಷೇತ್ರದಲ್ಲಿ ಕಳೆದ 5 ವರ್ಷದಲ್ಲಿ ಶಾಸಕರಾಗಿ ಅಭಿವೃದ್ಧಿಯ ಹರಿಕಾರರೆನಿಸಿಕೊಂಡಿದ್ದ ಕೆ.ಎನ್. ರಾಜಣ್ಣನವರು ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಿಂತ 18574 ಮತಗಳ ಅಂತರದಿಂದ ಸೋಲನುಭವಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಹತಾಶೆ ಮೂಡಿಸಿದೆ.

ಜಿಲ್ಲೆ ಮತ್ತು ರಾಜ್ಯದ ಗಮನ ಸೆಳೆದಿದ್ದ ಸಿರಾ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ (63978) ಅವರು ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಿ. ಸತ್ಯನಾರಾಯಣ ( 74338) ಅವರ ವಿರುದ್ಧ 10360 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ.

ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಕೆಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಿಜೆಪಿ ಅಭ್ಯರ್ಥಿ ಜಿ.ಬಿ. ಜ್ಯೋತಿಗಣೇಶ್ ಅವರು 60421 ಮತಗಳನ್ನು ಪಡೆದು ಜಯಗಳಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಾ. ರಫೀಕ್ಅಹಮದ್ (55128) ಅವರನ್ನು 5293 ಮತಗಳ ಅಂತರದಿಂದ ಸೋಲಿಸಿದ್ದಾರೆ.

ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ. ನಾಗೇಶ್ ಅವರು 61383 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಕೆ. ಷಡಕ್ಷರಿ ಅವರು 35820 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಲೋಕೇಶ್ವರ್ ಅವರು 17027 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ.

ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಂ ಅವರು 60710 ಮತಗಳನ್ನು ಪಡೆದು ಗೆಲುವು ಸಾಧಿಸುವ ಮೂಲಕ ಜೆಡಿಎಸ್ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪ (58661) ಅವರನ್ನು 2049 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚೌದ್ರಿರಂಗಪ್ಪ ಅವರು 24584 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳಲ್ಪಟ್ಟಿದ್ದಾರೆ.

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜೆ.ಸಿ. ಮಾಧುಸ್ವಾಮಿ ಅವರು 69612 ಮತಗಳನ್ನು ಪಡೆದು ಜಯಗಳಿಸಿದರೆ, ಜೆಡಿಎಸ್ ಅಭ್ಯರ್ಥಿ ಸಿ.ಬಿ. ಸುರೇಶ್‌ಬಾಬು 59335 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಜಯಚಂದ್ರ ಅವರು 45893 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಕಲ್ಪತರು ನಾಡಿಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಶಾ, ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿ ಭಾಷಣಗಳ ಸುರಿಮಳೆಗೈದರೂ ಸಹ ಮತದಾರರು ಮಾತ್ರ ತಮ್ಮಗೆ ಇಷ್ಟ ಬಂದ ಪಕ್ಷಕ್ಕೆ ಮತ್ತು ಅಭ್ಯರ್ಥಿಗಳಿಗೆ ಮಾತ್ರ ಮನ್ನಣೆ ನೀಡುವ ಮೂಲಕ ಪ್ರಜಾಪ್ರಭುತ್ವ ಹಕ್ಕು ನಮ್ಮದೇ ಎಂಬುದನ್ನು ಸಾಬೀತುಪಡಿಸಿದ್ದಾರೆ.

Leave a Comment