ಟಿಪ್ಪು ಜಯಂತಿ ಹಿನ್ನೆಲೆ; ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ಕೊಡಗು, ನ.9- ಜಿಲ್ಲೆಯಲ್ಲಿ ಸರಕಾರದ ವತಿಯಿಂದ ನಾಳೆ ಆಚರಿಸಲಾಗುವ ಟಿಪ್ಪು ಜಯಂತಿಗೆ ಪರ ಹಾಗೂ ವಿರೋಧ ವ್ಯಕ್ತವಾಗುತ್ತಿರುವುದರಿಂದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಸಂಜೆ 6ಗಂಟೆಯಿಂದ ನ.11ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆ ಜಾರಿಯಲ್ಲಿರುವ ದಿನಗಳಂದು ಸರಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ, ಗೃಹಪ್ರವೇಶದಂತಹ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸಭೆ, ಸಮಾರಂಭ, ಮೆರವಣಿಗೆಯನ್ನು ನಡೆಸುವಂತಿಲ್ಲ ಎಂದು ಸೂಚಿಸಿದ್ದಾರೆ ಸಾರ್ವಜನಿಕ, ರಾಜಕೀಯ ಬಹಿರಂಗ ಸಭೆ-ಸಮಾರಂಭ, ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತೆ ತಡೆ ಹಾಗೂ ಮುತ್ತಿಗೆ ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರಪತ್ರ, ಭಿತ್ತಿಪತ್ರ, ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ವಿವರಿಸಿದ್ದಾರೆ.

Leave a Comment