ಟ್ರಕ್‌ಗೆ ಬಸ್ ಡಿಕ್ಕಿ 6 ಮಂದಿ ಸಾವು

ಪುಣೆ, ಸೆ ೧೨- ಖಾಸಗಿ ಬಸ್‌ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಬೆಳಗಾವಿ ಮೂಲದ 6 ಮಂದಿ ಮೃತಪಟ್ಟು 20 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುಣೆ ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗಿನ ಜಾವ ವೇಗವಾಗಿ ಚಲಿಸುತ್ತಿದ್ದ ಬಸ್ ಸತಾರ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ 6 ಜನ ಸ್ಥಳದಲ್ಲೇ ಮೃತಪಟ್ಟು 10 ಜನ ಗಾಯಗೊಂಡಿದ್ದಾರೆ. ಮೃತಪಟ್ಟವರು ಬೆಳಗಾವಿ ಮೂಲದವರೆಂದು ಪೊಲೀಸರು ಹಾಗೂ ರಾಜ್ಯ ಹೆದ್ದಾರಿ ಪುಣೆ ವಿಭಾಗದ ಅಧೀಕ್ಷಕ ಮಿಲಿಂದ್ ಮೋಹಿತೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡ 20 ಜನರ ಸ್ಥಿತಿ ಗಂಭೀರವಾಗಿದೆ.
ಮುಂಬೈನಿಂದ ಬೆಳಗಾವಿಗೆ ಬರುತ್ತಿದ್ದ ಎಸ್.ಆರ್.ಎಸ್. ಖಾಸಗಿ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ. ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ. ಮೃತರ ಹೆಸರು ಹಾಗೂ ಮಾಹಿತಿಯನ್ನು ಪೊಲೀಸರು ಕಲೆ ಹಾಕಲು ಮುಂದಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸದ್ಯ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment