ಡಿ.8 ರಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು-ರೈತ ಸಂಘದಿಂದ ಪ್ರತಿಭಟನೆ

ಹೊಸಪೇಟೆ.ಡಿ.5 ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಡಿ.8 ರಂದು ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನ‌ಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಜೆ.ಕಾರ್ತೀಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಸ್ಥಳೀಯ ಅಮರಾವತಿ ಪ್ರವಾಸಿ ಮಂದಿರದಲ್ಲಿಂದು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಕೃಷಿ ಉತ್ಪನ್ನಗಳಿಗೆ ಕೂಡಲೇ ಪರಿಷ್ಕೃತ ಬೆಲೆ ನಿಗಧಿ ಮಾಡಿ, ಖರೀದಿ ಕೇಂದ್ರಗಳನ್ನು ತೆರೆಯಬೇಕು. ಅತೀವೃಷ್ಠಿ ಮತ್ತು ರದ್ದಿ ಹುಳುಗಳಿಂದ ಹಾನಿಗೊಳಗಾದ ಬೆಳೆಗಳಿಗೆ ಕೂಡಲೇ ಪರಿಹಾರ ವಿತರಿಸಬೇಕು. ಕೇಂದ್ರ ಸರ್ಕಾರ ಡಾ.ಸ್ವಾಮಿನಾಥನ್ ವರದಿಯನ್ನು ಕೂಡಲೇ ಜಾರಿ ಮಾಡಬೇಕು. ಕಬ್ಬಿಗೆ ಎಸ್.ಎ.ಪಿ.ಧರವನ್ನು ಘೋಷಣೆ ಮಾಡಬೇಕು. ಬಾಕಿ ಇರುವ ಕಬ್ಬಿನ ಬೆಲೆ ಮತ್ತು ಬಡ್ಡಿಯನ್ನು ನೀಡಬೇಕು. ಪ್ರತಿ ಹೋಬಳಿ ವ್ಯಾಪ್ತಿಯಲ್ಲಿ ದವಸ ಧಾನ್ಯಗಳ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಬೇಕು. ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಏ.10ನೇ ತಾರೀಖಿನ ವರೆಗೆ ಎರಡನೇ ಬೆಳೆಗೆ ನೀರು ಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಡಿ.8 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಅಲ್ಲದೆ ಜಿಲ್ಲೆಯ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಾರ್ಯದರ್ಶಿ ಪಿ.ಸತ್ಯನಾರಾಯಣ ರೆಡ್ಡಿ, ತಾಲೂಕು ಅಧ್ಯಕ್ಷ ಎಂ.ಜಡಿಯಪ್ಪ, ನಗರ ಘಟಕದ ಅಧ್ಯಕ್ಷ ಚಿನ್ನದೊರೆ, ಮುಖಂಡ ಕೆ.ಮೂರ್ತಿ ಉಪಸ್ಥಿತರಿದ್ದರು.

Leave a Comment