ತವರು ಕ್ಷೇತ್ರ ಉಳಿಸಿಕೊಳ್ಳುವಲ್ಲಿ ವಿಫಲರಾದರೆ ಪರಂ..?

ತುಮಕೂರು, ಮಾ. ೧೫- ಸತತ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಕಾರಣಕರ್ತರಾಗಿದ್ದ ಇಂದಿನ ಸಮ್ಮಿಶ್ರ ಸರ್ಕಾರದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹಾಲಿ ಕಾಂಗ್ರೆಸ್ ಸಂಸದರು ಇರುವ ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಉಳಿಸಿಕೊಳ್ಳುವಲ್ಲಿ ವಿಫಲರಾಗಿರುವುದು ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಮಟ್ಟದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಂತ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ದುರ್ಬಲರು ಎನ್ನುವುದು ದೋಸ್ತಿ ಪಕ್ಷಗಳ ಕ್ಷೇತ್ರ ಹಂಚಿಕೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ.

ಮೈಸೂರು ಲೋಕಸಭಾ ಕ್ಷೇತ್ರವನ್ನು ಶತಾಯ ಗತಾಯ ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರನ್ನು ಕಾಂಗ್ರೆಸ್‌ ಪಕ್ಷಕ್ಕೆ ಉಳಿಸಿಕೊಳ್ಳುವ ಮೂಲಕ ಇಡೀ ದೇಶ ಮತ್ತು ರಾಜ್ಯದಲ್ಲೇ ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ. ಆದರೆ ತಮ್ಮ ಪರಾಮಾಪ್ತರೂ ಆದ ಹಾಲಿ ಸಂಸದ ಮುದ್ದಹನುಮೇಗೌಡರಿಗೆ ಕ್ಷೇತ್ರವನ್ನು ಉಳಿಸಿಕೊಡುವಲ್ಲಿ ವಿಫಲರಾಗಿರುವ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ತುಮಕೂರು ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದಲ್ಲಿ ಪ್ರಬಲವಾಗಿದ್ದರೂ ಸಹ ಅಂತಿಮ ಕ್ಷಣದಲ್ಲಿ ತನ್ನ ತವರು ಕ್ಷೇತ್ರವನ್ನು ಉಳಿಸಿಕೊಳ್ಳದಿರುವ ಬಗ್ಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ತೀವ್ರ ನಿರಾಸೆ ಮೂಡಿಸಿರುವುದಂತೂ ಸುಳ್ಳಲ್ಲ.

ದೋಸ್ತಿ ಪಕ್ಷಗಳ ಸೀಟು ಹಂಚಿಕೆ ಸೇರಿದಂತೆ ಪಕ್ಷದ ಹಲವು ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಕಾಂಗ್ರೆಸ್ ಪಕ್ಷದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗಿಂತಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರಬಲರು ಎಂಬುದು ಪದೇ ಪದೇ ಸಾಬೀತಾಗುತ್ತಲೇ ಇದೆ.

ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಾ. ಜಿ. ಪರಮೇಶ್ವರ್ ಅವರನ್ನು ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಿದ್ದ ಹಾಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡರಿಗೆ ಪರಮೇಶ್ವರ್ ಅವರ ಕೊಡುಗೆ ಏನು ಎಂಬುದು ಕಲ್ಪತರುನಾಡಿನ ಜನರ ಪ್ರಶ್ನೆಯಾಗಿದೆ.

ಒಟ್ಟಾರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನ ಹಾಗೂ ಮೈತ್ರಿ ಧರ್ಮದ ಅಸ್ತ್ರಕ್ಕೆ ತಲೆಬಾಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತವರು ಜಿಲ್ಲೆಯ ಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Leave a Comment