ತುಮಕೂರಿನಲ್ಲಿ ಬಂದ್ ವಿಫಲ

ತುಮಕೂರು, ಫೆ. 13- ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಯಾವುದೇ ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಜನಜೀವನ ಯಥಾಸ್ಥಿತಿಯಲ್ಲಿದೆ.

ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬಂದ್ ವಾತಾವರಣ ನಿರ್ಮಾಣವಾಗಿಲ್ಲ. ಸಾರಿಗೆ ಸಂಸ್ಥೆ ಬಸ್‌ ಸಂಚಾರ, ಖಾಸಗಿ ಬಸ್‌ಗಳ ಸಂಚಾರ ಸೇರಿದಂತೆ ಆಟೋರಿಕ್ಷಾಗಳ ಸಂಚಾರವೂ ಎಂದಿನಂತಿದೆ.
ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಗರದಲ್ಲಿ ಯಾವುದೇ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಇಳಿದಿಲ್ಲ. ಹಾಗಾಗಿ ಜನಸಾಮಾನ್ಯರು ನಿರಾತಂಕವಾಗಿ ತಮ್ಮ ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲದೆ ತೆರಳುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ.

ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಹಾಗೆಯೇ ತುರ್ತು ಸೇವೆಗಳಾದ ಆಸ್ಪತ್ರೆಗಳು, ಖಾಸಗಿ ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ಮೆಡಿಕಲ್ ಸ್ಟೋರ್‌ಗಳು ಬಾಗಿಲು ತೆರೆದು ತಮ್ಮ ವ್ಯಾಪಾರ ವಹಿವಾಟನ್ನು ನಡೆಸಿದವು.

ಮುಂಜಾಗ್ರತಾ ಕ್ರಮವಾಗಿ ನಗರದ ವಿವಿಧೆಡೆ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಿರುವುದನ್ನು ಹೊರತುಪಡಿಸಿದರೆ ಇನ್ಯಾವುದೇ ರೀತಿಯ ಬಂದ್‌ ಆಗಲೀ, ಪ್ರತಿಭಟನೆಗಳಾಗಲೀ ನಡೆದಿರುವ ಬಗ್ಗೆ ವರದಿಯಾಗಿಲ್ಲ.

Leave a Comment