ತುಮಕೂರು ಕ್ಷೇತ್ರ ಕಾಂಗ್ರೆಸ್‌ಗೆ ಪಡೆಯಲು ಪ್ರಯತ್ನ – ಡಿಸಿಎಂ

ಬೆಂಗಳೂರು, ಮಾ. ೧೫- ಮಿತ್ರಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಸ್ಪರ್ಧಿಸುವುದಾದರೆ, ನಮ್ಮ ಅಭ್ಯಂತರವೇನೂ ಇಲ್ಲ. ಅವರ ಬದಲಿಗೆ ಬೇರೆಯವರು ಈ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ, ಈ ಕ್ಷೇತ್ರವನ್ನು ತಮ್ಮ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ವಾದವನ್ನು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜೆಡಿಎಸ್ ನಾಯಕರ ಮುಂದಿಟ್ಟಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಮಾಡಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದೇನೆ. ದೇವೇಗೌಡರು ಈ ಕ್ಷೇತ್ರದಿಂದ ಸ್ಪರ್ಧಿಸದಿದ್ದರೆ, ಹಾಲಿ ಸಂಸದರಿರುವ ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಂಸದ ಮುದ್ದಹನುಮೇಗೌಡರೊಂದಿಗೆ ಭೇಟಿಮಾಡಿ ಚರ್ಚಿಸಿದ ನಂತರ, ಅವರು ಈ ವಿಷಯ ತಿಳಿಸಿದ್ದಾರೆ.
ಹಾಲಿ ಕಾಂಗ್ರೆಸ್ ಸಂಸದರಿರುವ ತುಮಕೂರು ಲೋಕಸಭಾ ಕ್ಷೇತ್ರವನ್ನು ಪಕ್ಷದ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನ ಮುಂದುವರೆಸಿರುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.
ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆ. ಕಾಂಗ್ರೆಸ್ ಪಕ್ಷದ ಹಾಲಿ ಸಂಸದರಿರುವ ಈ ಕ್ಷೇತ್ರವನ್ನು ತಮಗೇ ಬಿಟ್ಟುಕೊಡಬೇಕು ಎಂಬ ಬಗ್ಗೆ ಹೈಕಮಾಂಡ್ ಮನವೊಲಿಸುವ ಪ್ರಯತ್ನ ಮಾಡುವುದಾಗಿ ಅವರು ಹೇಳಿದ್ದಾರೆ.
ಕಾಂಗ್ರೆಸ್‌ನ 10 ಮಂದಿ ಹಾಲಿ ಸಂಸದರಿರುವ ಯಾವುದೇ ಕ್ಷೇತ್ರಗಳನ್ನು ಮಿತ್ರಪಕ್ಷ ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂಬ ಬಗ್ಗೆ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಆದರೂ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಕೈಗೊಳ್ಳಲಾಗಿದೆ. ದೇವೇಗೌಡರು ಈ ಕ್ಷೇತ್ರದಿಂದ ಸ್ಪರ್ಧಿಸದಿದ್ದರೆ, ಕಾಂಗ್ರೆಸ್‌ಗೆ ಬಿಟ್ಟುಕೊಡುವಂತೆ, ಈಗಾಗಲೇ ಜೆಡಿಎಸ್ ವರಿಷ್ಠ ದೇವೇಗೌಡರವರೊಂದಿಗೂ ಮಾತನಾಡಿದ್ದೇನೆ ಎಂದು ಅವರು ಹೇಳಿದರು.
ಮುದ್ದಹನುಮೇಗೌಡರು ಕಳೆದ 5 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿ ಅವರು, ಗೆಲ್ಲುವ ಎಲ್ಲಾ ಸಾಧ್ಯತೆಗಳು ಇವೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಟಿಕೆಟ್ ತಪ್ಪಿಸುವುದು ಸೂಕ್ತವಲ್ಲ. ಸ್ಥಳೀಯ ಕಾಂಗ್ರೆಸ್ ನಾಯಕರೆಲ್ಲರೂ ಮುದ್ದ ಹನುಮೇಗೌಡರ ಪರವಾಗಿ ನಿಂತಿದ್ದಾರೆ. ಅಂತಿಮವಾಗಿ ಈ ಕ್ಷೇತ್ರ ತಮ್ಮ ಪಕ್ಷಕ್ಕೆ ಸಿಗುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಪ್ರಸ್ತಾವನೆ ಇರಲಿಲ್ಲ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಯಾವ ಆಧಾರದ ಮೇಲೆ ಕೈಗೊಳ್ಳಲಾಯಿತು ಎಂಬುದು ಗೊತ್ತಿಲ್ಲ. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ನಂತರ, ನಾವು ವಾಪಾಸ್ ಬಂದ ಮೇಲೆ ಈ ಬೆಳವಣಿಗೆಗಳು ಆಗಿರಬಹುದು ಎಂದು ಅವರು ಅಭಿಪ್ರಾಯಪಟ್ಟರು.

Leave a Comment