ತೊಗರಿ ಖರೀದಿ ಕೇಂದ್ರಕ್ಕೆ ಮುಖ್ಯಮಂತ್ರಿ ಪತ್ರ

ಬೆಂಗಳೂರು, ಫೆ. ೨೦- ಕಲ್ಯಾಣ ಕರ್ನಾಟಕ ಭಾಗದಲ್ಲಿ ತೊಗರಿ ಬೆಳೆಗಾರರು ಬೆಳೆದಿರುವ 20 ಕ್ವಿಂಟಾಲ್ ತೊಗರಿಯನ್ನು ಖರೀದಿ ಮಾಡಲು ಕೇಂದ್ರ ಸರ್ಕಾರದ ಅನುಮತಿ ಕೋರಿ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿಂದು ತಿಳಿಸಿದರು.
ಈಗಾಗಲೇ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರಿಂದ ಹತ್ತು ಕ್ವಿಂಟಾಲ್ ತೊಗರಿ ಖರೀದಿಸಲಾಗುತ್ತಿದೆ. ರೈತರ ಒತ್ತಾಯದ ಮೇರೆಗೆ 20 ಕ್ವಿಂಟಾಲ್ ತೊಗರಿ ಖರೀದಿ ಮಾಡಲು ಉದ್ದೇಶಿಸಿದ್ದು, ಇದಕ್ಕೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ಕೂಡಲೇ ಖರೀದಿಗೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.
ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಕುರಿತು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಮಾತನಾಡುವ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಕ್ವಿಂಟಾಲ್ ತೊಗರಿ ಖರೀದಿ ಮಾಡಲಾಗಿದೆ. 3 ಲಕ್ಷ 11 ಸಾವಿರ ರೈತರು ನೋಂದಾಣಿ ಮಾಡಿಕೊಂಡಿದ್ದಾರೆ. ಕೇಂದ್ರದಿಂದ ಅನುಮತಿ ದೊರೆತ ಕೂಡಲೇ 20 ಕ್ವಿಂಟಾಲ್ ತೊಗರಿಯನ್ನು ಖರೀದಿಸಲಾಗುವುದು ಎಂದು ಭರವಸೆ ನೀಡಿದರು.
ಸಹಕಾರ ಸಚಿವ ಸೋಮಶೇಖರ್, ಕೇಂದ್ರ ಸರ್ಕಾರದಿಂದ ಪ್ರತಿ ಕ್ವಿಂಟಾಲ್‌ ತೊಗರಿಗೆ 5800 ಮತ್ತು ರಾಜ್ಯ ಸರ್ಕಾರದಿಂದ 300 ರೂ. ಬೆಂಬಲ ಬೆಲೆ ಸೇರಿಸಿ 6100 ರೂ.ಗಳಂತೆ ರೈತರಿಂದ ತೊಗರಿ ಖರೀದಿ ಮಾಡಲಾಗುತ್ತಿದೆ ಎಂದರು.
20-25 ಕ್ವಿಂಟಾಲ್ ಖರೀದಿಗೆ ಅನುಮತಿ ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯ ಕಾರ್ಯದರ್ಶಿ ಅವರುಈಗಾಗಲೇ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಹಾಗೂ ತಾವು ಪತ್ರ ಬರೆದಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಹಲವಾರು ಶಾಸಕರು ತೊಗರಿ ಜತೆಗೆ ರಾಗಿ, ಭತ್ತ, ಕಡಲೆಕಾಳು ಖರೀದಿಗೂ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.

Leave a Comment