ದಿ.17 ಕನಿಷ್ಟ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು.ಜ.13- ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಟ ವೇತನ 18 ಸಾವಿರ ರೂ. ನೀಡಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಯೂನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ದಿ.17 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆಂದು ಜಿಲ್ಲಾಧ್ಯಕ್ಷ ಎನ್.ಎಸ್.ವೀರೇಶ ಹೇಳಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸ್ಕೀಮ್ ವರ್ಕರ್ಸ್‌ಗಳಾದ ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, 18 ಸಾವಿರ ಕನಿಷ್ಟ ವೇತನ ಪಾವತಿಸುವಂತೆ ಆಗ್ರಹಿಸಿ, ದೇಶದ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಒಂದು ದಿನ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಟ ವೇತನ ನೀಡಬೇಕೆಂದು ಆಗ್ರಹಿಸಿದರು.
ಮಾಸಿಕ 3 ಸಾವಿರ ಪಿಂಚಣಿ ಜೊತೆಗೂ ಸಾಮಾಜಿಕ ಭದ್ರತೆ ಕಲ್ಪಿಸಬೇಕು. 45ನೇ ಭಾರತ ಕಾರ್ಮಿಕ ಸಮ್ಮೇಳನದಲ್ಲಿ ಕೈಗೊಂಡಿರುವ ನಿರ್ಧಾರ ಜಾರಿಗೊಳಿಸಬೇಕು. ಐಸಿಡಿಎಸ್, ಎನ್‌ಹೆಚ್‌ಎಂ, ಎಂಡಿಎಂ ಹಾಗೂ ಎಸ್ಎಸ್ಎ ಸೇರಿದಂತೆ ಇತರೆ ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಲು ಸರ್ಕಾರ ಅನುದಾನ ಕಡಿತಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಬೇಕು ಹಾಗೂ ಮೇಲ್ಕಂಡ ಯೋಜನೆಗಳನ್ನು ಖಾಸಗೀಕರಣಗೊಳಿಸಬಾರದೆಂದು ಒತ್ತಾಯಿಸಿದರು. ವೇದಿಕೆಯಲ್ಲಿ ಈರಮ್ಮ, ಲಕ್ಷ್ಮೀ, ತಾಯಮ್ಮ ಉಪಸ್ಥಿತರಿದ್ದರು.

Leave a Comment