ಧರ್ಮಸ್ಥಳ ಸಂಘದ ಸದಸ್ಯರಿಂದ ಸ್ವಚ್ಛತಾ ಕಾರ್ಯ

ಹುಳಿಯಾರು, ಆ. ೧೪- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಟ್ಟಣದ ಕೆಂಕೆರೆ ಗ್ರಾಮದ ದೇವಸ್ಥಾನ ಹಾಗೂ ಅಂಗನವಾಡಿ ಮುಂಭಾಗವನ್ನು ಸ್ವಚ್ಛಗೊಳಿಸಲಾಯಿತು.

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಶಾಂತ್ ಮಾತನಾಡಿ, ರಾಜ್ಯದ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಯೋಜನೆ ವತಿಯಿಂದ ಶ್ರದ್ಧಾ ಕೇಂದ್ರಗಳ ಆವರಣವನ್ನು ಸ್ವಚ್ಛ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸಂತೋಷ್ ಮಾತನಾಡಿ, ವಲಯದ ದೇವಸ್ಥಾನ, ಮಸೀದಿ, ಚರ್ಚ್ ಮುಂತಾದ ಶ್ರದ್ಧಾ ಕೇಂದ್ರಗಳು ಹಾಗೂ ಅಂಗನವಾಡಿಗಳಲ್ಲಿ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಚ್ಛತಾ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದ್ದು, ಒಕ್ಕೂಟದ ಸದಸ್ಯರಿಂದ ಸ್ವಚ್ಛತಾ ಕಾರ್ಯವನ್ನು ನಡೆಸಲಾಗುತ್ತಿದೆ. ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಜನರಿಗೆ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ವಕೀಲ ವಿಶ್ವನಾಥ್ ಮಾತನಾಡಿ, ಸರ್ಕಾರವೇ ಎಲ್ಲವನ್ನು ಮಾಡಬೇಕು ಎಂಬ ಮನೋಭಾವ ಸರಿಯಲ್ಲ. ನಮ್ಮ ಸುತ್ತಲಿನ ಪರಿಸರದ ನೈರ್ಮಲ್ಯವನ್ನು ನಾವು ಕಾಪಾಡಿಕೊಳ್ಳಬೇಕು ಎಂದರು.

ಸ್ವಚ್ಛತೆ ಎಂಬುದು ಪ್ರತಿಯೊಬ್ಬರ ಮನೆಯಿಂದ ಪ್ರಾರಂಭವಾಗಬೇಕು. ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ರೋಗಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ. ಗ್ರಾಮಸ್ಥರು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು ಹಾಗೂ ಧರ್ಮಸ್ಥಳ ಸಂಘದ ಕೆಲಸಕ್ಕೆ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಹಸಿರುಸೇನೆ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್, ಕೆಂಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧುಗಳು, ಸ್ವಸಹಾಯ ಸಂಘದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Leave a Comment