ನಗರದ ಅಭಿವೃದ್ಧಿಗೆ ಕೇಂದ್ರ ನೆರವು ನೀಡಲಿದೆ – ಡಿವಿಎಸ್

ಬೆಂಗಳೂರು, ಸೆ. ೧೬- ನಗರದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಂಪೂರ್ಣ ನೆರವು ನೀಡಲಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಸದಾನಂದ ಗೌಡ ಅವರು ತಿಳಿಸಿದ್ದಾರೆ.
ನಗರದ ಕಂಠೀರವ ಮುಖ್ಯರಸ್ತೆಯ ಪರಿಮಳ ನಗರದಲ್ಲಿ 8 ಅ‌ಡಿ ಎತ್ತರದ ಕಂಚಿನ ಕೆಂಪೇಗೌಡರವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದರು.
ಜಗತ್ತಿನಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಜನತೆಗೆ ಅಗತ್ಯ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದ್ದು, ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರ ರೂಪಿಸಿರುವ ಯೋಜನೆಗಳಿಗೆ ಸಕಾಲಕ್ಕೆ ಸರಿಯಾಗಿ ಹಣಕಾಸಿನ ನೆರವು ನೀಡಲಾಗುವುದು ಎಂದರು.
ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕಾದರೆ, ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಸಂಘ – ಸಂಸ್ಥೆಗಳೂ ಕೂಡ ಸರ್ಕಾರದ ಜೊತೆ ಕೈಜೋಡಿಸಿ, ನಗರದ ಅಭಿವೃದ್ಧಿ ಶ್ರಮಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಿಸಿರುವ ಮಹಾಲಕ್ಷ್ಮಿಪುರಂನ ಒಕ್ಕಲಿಗರ ವೇದಿಕೆಯ ಅಧ್ಯಕ್ಷ ಜಯರಾಮೇಗೌಡ ಅವರು ಮಾತನಾಡಿ, ಸ್ಥಳೀಯರ ನೆರವಿನೊಂದಿಗೆ ಸುಮಾರು 8 ಅಡಿ ಎತ್ತರದ ಕೆಂಪೇಗೌಡರವರ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ನಗರದ ಜನತೆಗೆ ಕೆಂಪೇಗೌಡರ ಭವ್ಯ ಇತಿಹಾಸವನ್ನು ಸಾರಲು ಪ್ರತಿಮೆ ನಿರ್ಮಾಣ ಮಾಡಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗೋಪಾಲಯ್ಯ, ಮುಖಂಡರಾದ ಚೇತನ್, ಇನ್ನಿತರರು ಪಾಲ್ಗೊಂಡಿದ್ದರು. ನಾಡು – ನುಡಿಯ ಇತಿಹಾಸ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

 

Leave a Comment