ನೀತಿ ಆಯೋಗದ ಸಭೆ; ಕಾಂಗ್ರೆಸ್ ಮುಖ್ಯಮಂತ್ರಿಗಳನ್ನು ಭೇಟಿಯಾದ ಮನಮೋಹನ್ ಸಿಂಗ್

ನವದೆಹಲಿ, ಜೂನ್ 15 – ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಮಿತ್ರ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ನೀತಿ ಆಯೋಗದ ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶನಿವಾರ ನಡೆಯಲಿರುವ ನೀತಿ ಆಯೋಗದ ಆಡಳಿತ ಪರಿಷತ್ತಿನ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ಆಡಳಿತವಿರುವ ರಾಜ್ಯಗಳ ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್, ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಪುದುಚೆರಿ ಸಿಎಂ ವಿ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ನೀತಿ ಆಯೋಗದ ಸಭೆಯಲ್ಲಿ ಬರಗಾಲ ಪರಿಸ್ಥಿತಿ, ರೈತರ ಸಂಕಷ್ಟ, ಮಳೆ ನೀರು ಕೊಯ್ಲು ಹಾಗೂ ಮುಂಗಾರು ಬೆಳೆಗೆ ಸಿದ್ಧತೆ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.
ಇದು ಪ್ರಧಾನಿ ಮೋದಿ ಅವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ನಡೆಯುತ್ತಿರುವ ಮೊದಲ ಸಭೆಯಾಗಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಗಳು , ಕೇಂದ್ರ ಸಚಿವರು ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

Leave a Comment