ನ.13 : ಡಿಸಿಸಿ ಅಧ್ಯಕ್ಷರಾಗಿ ಬಿ.ವಿ.ನಾಯಕ ಪದಗ್ರಹಣ

ಮಲ್ಲಿಕಾರ್ಜುನ ಖರ್ಗೆ, ದಿನೇಶ ಗುಂಡೂರಾವ್ ಭಾಗಿ
ರಾಯಚೂರು.ನ.10- ನ.13 ರಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಬಿ.ವಿ.ನಾಯಕ ಅವರು ಪದಗ್ರಹಣ ಮಾಡಲಿದ್ದಾರೆಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಅವರು ಹೇಳಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಸೇರಿದಂತೆ ಇನ್ನಿತರ ಪ್ರಮುಖ ನಾಯಕರು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ತಿಳಿಸಿದರು.
ಅಧ್ಯಕ್ಷರ ಪದಗ್ರಹಣ ನಂತರ ಪಕ್ಷದ ನಾಯಕರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ ವಿವಿಧ ಬ್ಲಾಕ್ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದಾರೆಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಶಾಸಕ ದದ್ದಲ ಬಸವನಗೌಡ, ಮಾಜಿ ಸಂಸದ ಬಿ.ವಿ.ನಾಯಕ, ಪಾರಸಮಲ್ ಸುಖಾಣಿ, ನಗರಸಭೆ ಸದಸ್ಯ ಜಯಣ್ಣ, ಕೆ.ಶಾಂತಪ್ಪ, ಜಿ.ಬಸವರಾಜ ರೆಡ್ಡಿ, ಅಬ್ದುಲ್ ಕರೀಂ,  ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment