ಪೌರತ್ವ ಜಾಗೃತಿ ಸಂಜೆ ಮಂಗಳೂರಿನಲ್ಲಿ ರಾಜನಾಥ್ ಸಿಂಗ್ ಭಾಷಣ

ಮಂಗಳೂರು, ಜ. ೨೭- ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಂಜೆ ಕೂಳೂರಿನ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ಆಯೋಜಿಸಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಭೇಟಿಯ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದೆ.
ಸಂಜೆಯ ಸಮಾವೇಶದ ಹಿನ್ನೆಲೆಯಲ್ಲಿ ಕೂಳೂರು ಮೈದಾನ ಸಂಪರ್ಕ ಕಲ್ಪಿಸುವ ವಿವಿಧ ಮಾರ್ಗಗಳ ವಾಹನ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಿರುವುದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯತನಕ ಉಡುಪಿಯಿಂದ ಬೆಂಗಳೂರು ಕಡೆಗೆ ಚಲಿಸುವ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
ಕಾರ್ಕಳ, ಧರ್ಮಸ್ಥಳ, ಶಿರಾಡಿಘಾಟ್ ಮಾರ್ಗವಾಗಿ ಬೆಂಗಳೂರಿಗೆ, ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ನೆಲ್ಕಾರ್ ಮೂಲಕ ಬಿಸಿ ರೋಡ್ ಮಾರ್ಗವಾಗಿ ಮಂಗಳೂರು ತಲುಪಬಹುದಾಗಿದೆ.
ಸಂಜೆ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

Leave a Comment