ಪ್ರಧಾನಮಂತ್ರಿಗಳ ಕಾರ್ಯಕ್ರಮ ಪರಿಶೀಲನೆಗೆ ಮುಖ್ಯಮಂತ್ರಿ ಸೂಚನೆ

 

ಬೆಂಗಳೂರು, ಜೂ 13 -ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎರಡನೇ ದಿನವಾದ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದಿಂದ ಸಾಕಷ್ಟು ಅನುಕೂಲವಾಗಲಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನದ ಪೈಕಿ ಶೇ 75 ರಷ್ಟನ್ನು ಬಿಡುಗಡೆ ಮಾಡಲಾಗುವುದು. ಕೂಡಲೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಕುಮಾರ ಸ್ವಾಮಿ ಸೂಚಿಸಿದರು.
ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಗಳಿಗೆ ಮಂಜೂರಾದ 4080 ಕಾಮಗಾರಿಗಳ ಪೈಕಿ 765 ಕಾಮಗಾರಿಗಳು ಪೂರ್ಣಗೊಂಡಿವೆ. ಒಟ್ಟು 1929 ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಲು ಅನುವಾಗುವಂತೆ ತುರ್ತಾಗಿ ಭರ್ತಿ ಮಾಡುವ ಅಗತ್ಯವಿರುವ ಹುದ್ದೆಗಳಿಗೆ ನಿವೃತ್ತ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೂ ಅನುದಾನ ಮೀಸಲಿಡುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರಿಗೆ ಸೂಚಿಸಿದ ಕುಮಾರ ಸ್ವಾಮಿ, ದೇವರಾಜ ಅರಸು ವಸತಿ ಯೋಜನೆಯಡಿ ದಮನಿತರು, ಶೋಷಿತ ವರ್ಗದವರಿಗೆ ವಸತಿ ಸೌಲಭ್ಯ ಮಂಜೂರು ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಹೆಚ್ಚಿನ ಆಸಕ್ತಿ ವಹಿಸಬೇಕು. ಈ ವಲಯದಲ್ಲಿ ನಿಗದಿ ಪಡಿಸಲಾಗಿರುವ 63,196 ಮನೆಗಳ ಗುರಿ ಪೈಕಿ ಕೇವಲ 32,075 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಹೀಗಾಗಿ ಮುತುವರ್ಜಿಯಿಂದ ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಫಲಾನುಭವಿಗಳನ್ನು ಗುರುತಿಸಿ ಮನೆ ಹಂಚಿಕೆ ಮಾಡಬೇಕು. ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಕೂಡಲೇ ಜಮೀನು ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.

 

Leave a Comment