ಬಡಮಕ್ಕಳಿಗೂ ಆಂಗ್ಲ ಶಿಕ್ಷಣ ಭಾಗ್ಯ: 1 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಲಿಕೆಗೆ ಸಿಎಂ ಚಾಲನೆ

ಬೆಂಗಳೂರು, ಜೂ. ೧೪- ಕನ್ನಡ ಸಾರಸ್ವತ ಲೋಕದ ಹಿರಿಯ ಸಾಹಿತಿಗಳೂ ಸೇರಿದಂತೆ, ಕನ್ನಡಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಪ್ರಾಥಮಿಕ ಶಾಲಾ ಮಟ್ಟದಿಂದ ಇಂಗ್ಲಿಷ್ ಕಲಿಸುವ ಉದ್ದೇಶದಿಂದ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭಿಸುವುದಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ವಿದ್ಯುಕ್ತ ಚಾಲನೆ ನೀಡಿದರು.

  • ಕಡುಬಡವರ ಮಕ್ಕಳಿಗೆ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಅವಕಾಶ.
  •  ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಯೋಜನೆ ಜಾರಿ.
  •  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ವಿದ್ಯುಕ್ತ ಚಾಲನೆ.
  •  ಕುಮಾರಸ್ವಾಮಿ ಅವರ ದೂರದೃಷ್ಟಿತ್ವದ ಫಲಶೃತಿ.
  •  ನೂರು ಕೆಪಿಎಸ್ ಶಾಲೆಗಳ ಆರಂಭಕ್ಕೂ ಕೂಡಿಬಂದ ಮುಹೂರ್ತ.
  •  ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳ ಆರಂಭ.

ಸರ್ಕಾರಿ ಶಾಲೆಗಳಲ್ಲಿ ಓದುವ ಕಡುಬಡವರ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯಬೇಕು. ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಶಿಕ್ಷಣ ಪಡೆಯಲು ಆಂಗ್ಲ ಭಾಷಾ ಶಿಕ್ಷಣ ಅತ್ಯಗತ್ಯ ಎಂಬುದನ್ನು ಪ್ರತಿಪಾದಿಸುತ್ತ ಬಂದಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಕನಸಿನ ಯೋಜನೆಯಾದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಕಲಿಸುವುದಕ್ಕೆ ಚಾಲನೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಒಂದನೇ ತರಗತಿ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭ, ನೂರು ಹೊಸ ಕೆಪಿಎಸ್ ಶಾಲೆಗಳ ಪ್ರಾರಂಭ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭಕ್ಕೆ ಓಂಕಾರ ಹೇಳಿದರು.

ಶ್ರೀಮಂತರ ಮಕ್ಕಳು ಮಾತ್ರವೇ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಕಲಿಯುತ್ತಿರುವುದರಿಂದ ಎಲ್ಲಾ ರೀತಿಯ ಸ್ಪರ್ಧೆಗಳಲ್ಲಿ ಮುಂಚೂಣಿಯಲ್ಲಿ ನಿಲ್ಲಲು ಸಾಧ್ಯವಾಗಿದೆ. ಬಡವರ ಮಕ್ಕಳು ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳನ್ನೇ ನಂಬುವಂತಹ ಸ್ಥಿತಿ ಇದೆ. ಇದಕ್ಕೆ ಇತಿಶ್ರೀ ಹಾಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಕುಮಾರಸ್ವಾಮಿ ಅವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಕಳೆದ ಬಜೆಟ್‌ನಲ್ಲಿ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಕಲಿಕಾ ವಿಭಾಗವನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದರು.

ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವ ಮೂಲಕ ರಾಜ್ಯದ ಜನತೆಗೆ ನೀಡಿದ ವಾಗ್ದಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವುದಾಗಿಯೂ ಘೋಷಿಸಿದ್ದರು.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು. ಖಾಸಗಿ ಶಾಲೆಗಳತ್ತ ಮುಖ ಮಾಡುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದಕ್ಕೂ ಅವರು ಚಾಲನೆ ನೀಡಿದ್ದಾರೆ.

ಸ್ವತಹ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಖಾತೆ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಸೇರಿದಂತೆ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

 

Leave a Comment