ಬಿಸಿಸಿಐ ಅಧ್ಯಕ್ಷ ಸ್ಥಾನ ನಿರ್ವಹಣೆ ದೊಡ್ಡ ಸವಾಲು: ಗಂಗೂಲಿ

ಮುಂಬೈ, ಅ 14 – ಇಡೀ ವಿಶ್ವದಲ್ಲೇ ಶ್ರೀಮಂತ ಕ್ರಿಕೆಟ್ ಸಂಸ್ಥೆ ಭಾರತೀಯ ನಿಯಂತ್ರಣ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸುವ ಹೊಸ್ತಿಲಲ್ಲಿರುವ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಈ ಜವಾಬ್ದಾರಿ ನಿರ್ವಹಿಸುವುದು ಸವಾಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚುನಾವಣೆಗೆ ಸಂಬಂಧಪಟ್ಟಂತೆ ಮುಂಬಯಿಯಲ್ಲಿ ಭಾನುವಾರ ನಡೆದ ಹಲವು ಸುತ್ತುಗಳ ಮಾತುಕತೆಗಳ ಬಳಿಕ ಭಾರತ ಕ್ರಿಕೆಟ್ ತಂಡದ ಮಾಜಿ ಯಶಸ್ವಿ ನಾಯಕ ಸೌರವ್ ಗಂಗೂಲಿ ಮುಂದಿನ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ನೇಮಿತಿ ಆಡಳಿತಾತ್ಮಕ ಸಮಿತಿ ಅಕ್ಟೋಬರ್ 23ರಂದು ಬಿಸಿಸಿಐ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದು, ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಹಾಗೂ ಕರ್ನಾಟಕದ ಬ್ರಿಜೇಶ್ ಪಟೇಲ್ ಐಪಿಎಲ್ ಮುಖ್ಯಸ್ಥರಾಗಿ ಆಯ್ಕೆಯಾಗುವುದು ಖಚಿತವೆನಿಸಿದೆ.

ಬಿಸಿಸಿಐ ಅಧ್ಯಕ್ಷನಾಗಿ ನೇಮಕವಾಗುತ್ತಿರುವುದಕ್ಕೆ ಸಂತಸವಾಗಿದೆ. ನನ್ನ ಪಾಲಿಗೆ ಇದೊಂದು ಅದ್ಭುತ ಅವಕಾಶ. ಜಾಗತಿಕ ಕ್ರಿಕೆಟ್‍ನ ಅತ್ಯಂತ ದೊಡ್ಡ ಕ್ರಿಕೆಟ್ ಮಂಡಳಿ ಬಿಸಿಸಿಐ ಆಗಿರುವುದರಿಂದ ನನಗೆ ನೀಡಿರುವ ಜವಾಬ್ದಾರಿ ನಿರ್ವಹಿಸುವುದು ದೊಡ್ಡ ಸವಾಲು. ಇದೊಂದು ದೊಡ್ಡ ಜವಾಬ್ದಾರಿ ಎಂದು ಹೇಳಿದರು.

ಪ್ರಥಮ ದರ್ಜೆ ಕ್ರಿಕೆಟಿಗರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡುವುದು ನನ್ನ ಮೊದಲ ಆದ್ಯತೆ. ರಣಜಿ ಆಟಗಾರರಿಗೆ ಆರ್ಥಿಕವಾಗಿ ನೆರವಾಗಲು ಹಲವು ಬಾರಿ ಕ್ರಿಕೆಟ್ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದೆ. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಗಂಗೂಲಿ ಹೇಳಿದ್ದಾರೆ.

Leave a Comment