ಬೀದಿ ಬದಿ ವ್ಯಾಪಾರಿಗಳ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ತುಮಕೂರು, ಜ. ೧೨- ನಗರದ ಜೆಸಿ ರಸ್ತೆಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಯಾವುದೇ ನೋಟಿಸ್ ನೀಡದೇ ಜೆಸಿಬಿ ಯಂತ್ರಗಳ ಮೂಲಕ ಅಂಗಡಿಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಟೌನ್‌ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವ್ಯಾಪಾರಿಗಳು, ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಬಾಬಾ ಮಾತನಾಡಿ, ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದೇ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಅಕ್ರಮವಾಗಿ ಒಕ್ಕಲೆಬ್ಬಿಸುವ ಪ್ರಯತ್ನವನ್ನು ಮಾಡಲಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬೀದಿಬದಿ ವ್ಯಾಪಾರಿಗಳ ಹಿತ ಕಾಯುವಂತೆ ಮನವಿ ಮಾಡಿದರು.

ಕಳೆದ 10-15 ವರ್ಷಗಳಿಂದ ಅಲ್ಲಿಯೇ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ವ್ಯಾಪಾರಿಗಳಿಗೆ ನೋಟಿಸ್ ನೀಡದೆ, ವ್ಯಾಪಾರಿಗಳ ಕುಂದುಕೊರತೆ ಸಭೆ ಕರೆಯದೇ ಅಂಗಡಿ, ತಳ್ಳುವ ಗಾಡಿಗಳನ್ನು ತೆರವುಗೊಳಿಸಿರುವುದರಿಂದ ವ್ಯಾಪಾರಿಗಳ ಬದುಕು ಬೀದಿಪಾಲು ಮಾಡಲಾಗಿದೆ. ಬೀದಿಬದಿ ವ್ಯಾಪಾರವನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರು. ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲು ಆದೇಶ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಿಕೊಳ್ಳಲು ಅಗತ್ಯ ಜಾಗವನ್ನು ಗುರುತಿಸಿ, ಮೂಲಸೌಕರ್ಯ ಕಲ್ಪಿಸಿದ ನಂತರ ಅಂಗಡಿಗಳನ್ನು ತೆರವುಗೊಳಿಸಬೇಕು ಹಾಗೂ ಅಲ್ಲಿಯವರೆಗೆ ವ್ಯಾಪಾರಿಗಳಿಗೆ ಅಲ್ಲಿಯೇ ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ನಯಾಜ್, ಗರುಡಪ್ಪ, ಗಣೇಶ್ ಮತ್ತಿತರರು ಪಾಲ್ಗೊಂಡಿದ್ದರು.

Leave a Comment