ಭಾರತ್ ಬಂದ್: ತುಮಕೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ

ತುಮಕೂರು, ಸೆ. ೧೦- ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಇಂದು ಕರೆ ನೀಡಿದ್ದ ಭಾರತ್ ಬಂದ್‌‌ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರತಿನಿತ್ಯ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತಿರುವ ಜನಸಾಮಾನ್ಯರು ಇಂದು ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್‌ಗೆ ಯಾವುದೇ ಪ್ರತಿರೋಧ ವ್ಯಕ್ತಪಡಿಸದೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರಿಂದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬಹಿರಂಗವಾಗಿಯೇ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ತುಮಕೂರು ನಗರ, ಕುಣಿಗಲ್, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಮಧುಗಿರಿ, ಸಿರಾ ಹಾಗೂ ಪಾವಗಡ ತಾಲ್ಲೂಕಿನಲ್ಲೂ ಇಂದಿನ ಭಾರತ್ ಬಂದ್‌ ಸಫಲವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಸಂಸ್ಥೆ ಬಸ್‌ಗಳು, ಖಾಸಗಿ ಬಸ್‌ಗಳು ರಸ್ತೆಗಿಳಿಯದ ಪರಿಣಾಮ ತುಮಕೂರಿನಿಂದ ಬೆಂಗಳೂರು, ಶಿವಮೊಗ್ಗ ಸೇರಿದಂತೆ ದೂರದ ಊರುಗಳಿಗೆ ಹೋಗುವ ಮತ್ತು ಬೇರೆ ಬೇರೆ ಊರುಗಳಿಂದ ತುಮಕೂರಿಗೆ ಬಂದು ಮತ್ತೆ ವಾಪಸ್ಸಾಗಲು ಪ್ರಯಾಣಿಕರು ಬಸ್‌ಗಾಗಿ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣಗಳಲ್ಲಿ ಕಾಯುತ್ತಿದ್ದು, ಬಸ್‌ಗಳ ಸಂಚಾರ ಇಲ್ಲದೆ ಅವರ ಪಾಡಂತೂ ಹೇಳತೀರದಾಗಿತ್ತು.
ಬಂದ್ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಸಾರಿಗೆ ಸಂಸ್ಥೆ ಬಸ್‌ ಹಾಗೂ ಖಾಸಗಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿರುವುದರಿಂದ ನ್ಯಾಯಲಯಗಳಿಗೆ ತೆರಳುವ ಕಕ್ಷಿದಾರರು, ವಕೀಲರು, ಸರ್ಕಾರಿ ಕಚೇರಿಗಳ ನೌಕರರು

ತಮ್ಮ ತಮ್ಮ ಜಾಗಗಳಿಗೆ ಹೋಗಲು ಆಟೋ, ಬೈಕ್‌ಗಳ ಮೊರೆ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಭಾರತ್ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿನ್ನೆ ಸಂಜೆಯ ಜಿಲ್ಲಾಧಿಕಾರಿ ಡಾ. ರಾಕೇಶ್‌ಕುಮಾರ್ ಅವರು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಈ ಬಂದ್ ಬಿಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ತಟ್ಟಲಿಲ್ಲ. ಆದರೆ ಇತರೆ ಸರ್ಕಾರಿ ಕಚೇರಿಗಳ ನೌಕರರಂತೂ ನಮಗೂ ರಜೆ ಘೋಷಿಸಬೇಕಾಗಿತ್ತು. ನಾವೇನು ಮನುಷ್ಯರಲ್ಲವೇ, ಹೇಗೆ ಕಚೇರಿಗಳಿಗೆ ಹೋಗುವುದ ಎಂದ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಕಂಡು ಬಂತು. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳಲ್ಲಿ ನೌಕರರ ಹಾಜರಾತಿ ವಿರಳವಾಗಿತ್ತು.

ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಾದ ಎಂ.ಜಿ. ರಸ್ತೆ, ಮಂಡಿಪೇಟೆ, ಅಶೋಕ ರಸ್ತೆ, ಬಿ.ಹೆಚ್. ರಸ್ತೆ, ಎಸ್.ಎಸ್.ಪುರಂಗಳಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿಯೇ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು.

ತುರ್ತು ಸೇವೆಗಳಾದ ಆಸ್ಪತ್ರೆಗಳು, ಕ್ಲಿನಿಕ್‌ಗಳು, ಮೆಡಿಕಲ್ ಸ್ಟೋರ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದನ್ನು ಹೊರತುಪಡಿಸಿದರೆ ಹೋಟೆಲ್‌ಗಳು, ಚಿತ್ರಮಂದಿರಗಳು ಸಹ ತಮ್ಮ ವ್ಯಾಪಾರ ವಹಿವಾಟನ್ನು ಬಂದ್ ಮಾಡಿದ್ದವು.
ಬಸ್‌ಗಳು ರಸ್ತೆಗಿಳಿಯದೇ ಇರುವುದನ್ನು ಬಂಡವಾಳವಾಗಿಸಿಕೊಂಡ ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ಪ್ರಯಾಣಿಕರಿಂದ ಆರೋಪಗಳು ಕೇಳಿ ಬಂದವು. ಆದರೂ ವಿಧಿಯಿಲ್ಲದೆ ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಲೇ ದುಪ್ಪಟ್ಟು ಹಣ ಕೊಟ್ಟು ತಮ್ಮ ತಮ್ಮ ಕಚೇರಿಗಳು, ಊರುಗಳಿಗೆ ತೆರಳಿದರು.

ಟಾಂಗಾದಲ್ಲಿ ಪ್ರತಿಭಟನೆ
ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದ ಮುಂಭಾಗದಿಂದ ಜಟಕಾಗಾಡಿಯಲ್ಲಿ ಕುಳಿತು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಗಮನ ಸೆಳೆದರು.
ಇನ್ನು ಕೆಲ ಕಾಂಗ್ರೆಸ್ ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಬೈಕ್ ಱ್ಯಾಲಿ ಮುಖೇನ ಸಂಚರಿಸಿ ತೆರೆದಿದ್ದ ಅಂಗಡಿ ಮುಂಗಟ್ಟುಗಳನ್ನು ಬಲವಂತದಿಂದ ಬಾಗಿಲು ಮುಚ್ಚಿಸಿದರು.

ನಂತರ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಎಡಪಕ್ಷಗಳ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರಧಾನಿ ನರೇಂದ್ರಮೋದಿಯವರ ಪ್ರತಿಕೃತಿ ದಹಿಸಿದರು.
ಕೂಡಲೇ ಏರಿಸಿರುವ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಸುವ ಮೂಲಕ ಜನಸಾಮಾನ್ಯರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನು ಉಗ್ರ ಸ್ವರೂಪದ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಭಾರತ್ ಬಂದ್ ಹಿನ್ನೆಲೆಯಲ್ಲಿ ನಗರದ ಆಯಕಟ್ಟಿನ ಸ್ಥಳಗಳು ಸೇರಿದಂತೆ ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದಿವ್ಯಾಗೋಪಿನಾಥ್, ಅಡಿಷನಲ್ ಎಸ್ಪಿ ಡಾ. ಶೋಭರಾಣಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Leave a Comment