ಮಂಡ್ಯಕ್ಕೆ ನಿಖಿಲ್ ಕುಮಾರ್ ಅಭ್ಯರ್ಥಿ  ಸಮಾವೇಶದಲ್ಲಿ ಡಿ.ಸಿ ತಮ್ಮಣ್ಣ ಘೋಷಣೆ

ಮಂಡ್ಯ, ಮಾ. ೧೪- ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.

ನಿನ್ನೆಯಷ್ಟೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪ್ರತಿನಿಧಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರವನ್ನು ಹಿರಿಯ ಪುತ್ರ ಹೆಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಅಭ್ಯರ್ಥಿಯನ್ನಾಗಿ ಪ್ರಕಟಿಸಿದ ಬೆನ್ನಲ್ಲೆ ಇಂದು ಜೆಡಿಎಸ್ ಭದ್ರಕೋಟೆ ಎನಿಸಿರುವ ಮಂಡ್ಯದಲ್ಲಿ ನಿಖಿಲ್ ಕುಮಾರ್ ಹೆಸರನ್ನು ಘೋಷಣೆ ಮಾಡಲಾಯಿತು.

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶದಲ್ಲಿ ನಿಖಿಲ್ ಕುಮಾರ್ ಅವರ ಹೆಸರನ್ನು ಘೋಷಣೆ ಮಾಡುವ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಸಿತು.

ನಿಖಿಲ್ ಕುಮಾರ್ ಅವರ ಹೆಸರನ್ನು ಪ್ರಕಟಿಸುವ ಸಂದರ್ಭದಲ್ಲಿ ಬೃಹತ್ ವೇದಿಕೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರಾಗಲಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಾಗಲಿ ಇಲ್ಲದಿರುವ ಸಂದರ್ಭದಲ್ಲೇ ಪ್ರಕಟಿಸಲಾಯಿತು. ಇದಕ್ಕೆ ಕಾರಣ ಜ್ಯೋತಿಷಿಗಳ ಸಲಹೆ ಎಂದು ಮೂಲಗಳು ತಿಳಿಸಿವೆ.

ಯಾವುದೇ ಶುಭಕಾರ್ಯಗಳನ್ನು ಮಾಡಬೇಕಾದರೆ ದೇವೇಗೌಡರ ಕುಟುಂಬ ಶುಭ ಘಳಿಗೆ, ರಾಹುಕಾಲವನ್ನು ಗಮನಿಸಿ ಮತ್ತು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಿರ್ಧಾರ ಕೈಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ 12 ಗಂಟೆಯೊಳಗೆ ನಿಖಿಲ್ ಕುಮಾರ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಶುಭ ಘಳಿಗೆಯಲ್ಲಿ ಹೆಸರು ಪ್ರಕಟಿಸುವಂತೆ ಜೆಡಿಎಸ್ ವರಿಷ್ಠ ದೇವೇಗೌಡ ಸೂಚಿಸಿದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ತಮ್ಮಣ್ಣ ಅವರೇ ವಿದ್ಯುಕ್ತವಾಗಿ ಪ್ರಕಟಿಸಿದರು. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದು, ಸಹಜವಾಗಿಯೇ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಮೂಲಕ ಮೈತ್ರಿ ಧರ್ಮ ಪಾಲಿಸಲಾಗಿದೆ. ಈಗ ಜೆಡಿಎಸ್‌ನಿಂದ ನಿಖಿಲ್ ಕುಮಾರ್ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಆದರೆ, ಕಾಂಗ್ರೆಸ್‌ನಿಂದ ಸುಮಲತಾ ಅಂಬರೀಷ್ ಸ್ಪರ್ಧಿಸಲು ಮುಂದಾಗಿದ್ದರು. ಈಗ ಈ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡಲಾಗಿದ್ದು, ಸುಮಲತಾ ಅವರ ನಡೆ ಕುತೂಹಲ ಮೂಡಿಸಿದೆ.

Leave a Comment