ಮಕ್ಕಳ ರಕ್ಷಣಾ ವ್ಯವಸ್ಥೆ ಬಲಪಡಿಸಲು ಸೂಚನೆ

ಕಲಬುರಗಿ,ಡಿ.7-ಮಕ್ಕಳ ರಕ್ಷಣಾ ವ್ಯವಸ್ಥೆ ಬಲಪಡಿಸಬೇಕು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮ ಪಂಚಾಯತಿ, ತಾಲ್ಲೂಕ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಮೂರು ಹಂತಗಳಲ್ಲಿ (ತ್ರೀಟಾಯರ್ ಸಿಸ್ಟಮ್)  ಕೆಲಸ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ವೈ.ಮರಿಸ್ವಾಮಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಮಕ್ಕಳ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಹಮ್ಮಿಕೊಂಡಿದ್ದ ಮಾಹಿತಿ ಮತ್ತು ಕ್ರೀಯಾಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಮಕ್ಕಳು ದೇಶದ ಆಸ್ತಿ. ದೇಶದಲ್ಲಿ 100ಕ್ಕೆ ಶೇ.40 ರಷ್ಟು ಜನ 18 ವರ್ಷದೊಳಗಿನ ಮಕ್ಕಳಿದ್ದಾರೆ. ಪ್ರಪಂಚದಲ್ಲಿಯೇ ಅತಿ ಹೆಚ್ಚು ಸಂಖ್ಯೆಲ್ಲಿ ಮಕ್ಕಳಿರುವ ದೇಶ ಭಾರತವಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯ ಮಂಡಳಿ, 1098 ಸಹಾಯವಾಣಿ ಸ್ಥಾಪಿಸಲಾಗಿದ್ದರೂ ಮಕ್ಕಳ ಹಕ್ಕುಗಳ ಉಲ್ಲಂಘನೆ ನಿಂತಿಲ್ಲ. ಮಕ್ಕಳ ಹಕ್ಕುಗಳ ರಕ್ಷಣೆಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದರು.

ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಅಪೌಷ್ಠಿಕತೆ ಹೆಚ್ಚಿದ್ದು, ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿವೆ. ಜಿಲ್ಲಾಡಳಿತ 300ಕ್ಕೂ ಹೆಚ್ಚು ಬಾಲ್ಯವಿವಾಹ ತಡೆದಿರುವುದು ಶ್ಲಾಘನೀಯ ಕೆಲಸವಾಗಿದ್ದು, ಬಾಲಕಾರ್ಮಿಕ ಪದ್ಧತಿ ಮತ್ತು ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಹೈಕ ಭಾಗದಲ್ಲಿ ಅಲೆಮಾರಿ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಅವರನ್ನು ಸಮಾಜದ ಮುಖ್ಯವಾಹನಿಗೆ ತರುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಶ್ರಮಿಸಬೇಕು ಎಂದರು.

ಕೆಲವು ಕಡೆ ಅಧಿಕಾರಿಗಳ ಮೂಗಿನ ನೇರಕ್ಕೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಅಸಾಮಾಧಾನ ವ್ಯಕ್ತಪಡಿಸಿದ ಮರಿಸ್ವಾಮಿ ಅವರು ಅಧಿಕಾರಿಗಳು ಇದಕ್ಕೆ ಆಸ್ಪದ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಅವರು ಮಾತನಾಡಿ, ಜಿಲ್ಲೆಯಲ್ಲಿ ದೇವದಾಸಿ ಮತ್ತು ಬಾಲ್ಯವಿವಾಹ ಪದ್ಧತಿ ತಡೆಗೆ ಕ್ರಮ ಕೈಗೊಳ್ಳಲಾಗಿದೆ. ಇಂತಹ ಪದ್ಧತಿಗಳ ತಡೆಯುವುದು ಎಲ್ಲರ ಜವಾಬ್ದಾರಿಯಾಗಿದ್ದು, ಕೇವಲ ಶಿಕ್ಷೆ ವಿಧಿಸುವುದರಿಂದ ಈ ಪದ್ಧತಿಗಳ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಬೇಕು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೋಬಳಿ, ತಾಲ್ಲೂಕ ಮಟ್ಟದಲ್ಲಿಯೂ ಕಾರ್ಯಾಗಾರ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳಾ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್.ಮಾಣಿಕ್ಯ, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಜಾ ಪಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿ.ರೀನಾ ರಶ್ಮಿ ಡಿಸೋಜ, ಆಯೋಗದ ಸದಸ್ಯ ಚಂದ್ರಶೇಖರ ಅಲ್ಲಿಪೂರ,  ಮಕ್ಕಳ ಸಂರಕ್ಷಣಾ ಯೋಜನೆ ಕಾರ್ಯಕ್ರಮ ಸಂಯೋಜಕ  ರಾಘವೇಂದ್ರ ಭಟ್ ವೇದಿಕೆ ಮೇಲಿದ್ದರು.

ಎ.ಎಸ್ಪಿ ಲೋಕೇಶ್, ಡಾನ್ ಬಾಸ್ಕೋ ನಿರ್ದೇಶಕ ಸಜೀ ಜಾರ್ಜ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ (ಪ್ರಭಾರಿ) ಭೀಮರಾಯ ಕಣ್ಣೂರ, ಆನಂದರಾಜ್, ವಿಠ್ಠಲ ಚಿಕಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಸರ್ಕಾರಿ ಅಂಧ ಬಾಲಕರ ಶಾಲೆ ಮಕ್ಕಳು ಪ್ರಾರ್ಥನಾಗೀತೆ ಹಾಡಿದರು. ಭರತೇಶ ಶೀಲವಂತ ಕಾರ್ಯಕ್ರಮ ನಿರೂಪಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯುನಿಸೆಫ್ ಹಾಗೂ ಡಾನ್ ಬೋಸ್ಕೋ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಾಗಾರ ನಡೆಯಿತು.

Leave a Comment