ಮಾನಸಿಕ-ದೈಹಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಕಾಮತ್

ಮಂಗಳೂರು, ಜೂ.೨೧- ಮಾನಸಿಕ-ದೈಹಿಕ ಆರೋಗ್ಯಕ್ಕಾಗಿ ಮತ್ತು ಒತ್ತಡ ನಿವಾರಣೆಗೆ ಯೋಗ ಸಹಕಾರಿ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಭಿಪ್ರಾಯಿಸಿದ್ದಾರೆ.
ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ದ.ಕ. ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಇಂದು ಬೆಳಗ್ಗೆ ಆಯೋಜಿಸಿದ್ದ ಸಾಮೂಹಿಕ ಯೋಗ ಕಾರ್ಯಕ್ರಮ ವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸಾವಿರಾರು ವರ್ಷ ಗಳ ಹಿಂದೆ ಪತಂಜಲಿ ಮಹರ್ಷಿ ಮೂಲಕ ನಮ್ಮ ದೇಶಕ್ಕೆ ದೊರೆತ ಯೋಗ ಇಂದು ವಿಶ್ವ ಸಂಸ್ಥೆಯ ಮನ್ನಣೆ ಪಡೆದು ಪ್ರತೀ ವರ್ಷ ಜೂನ್ ೨೧ರಂದು ಅಂತರ್‌ರಾಷ್ಟ್ರೀಯ ಯೋಗ ದಿನವಾಗಿ ಆಚರಿಸಲ್ಪಡುತ್ತಿರುವುದು ಭಾರತೀಯರು ಹೆಮ್ಮೆ ಪಡುವ ವಿಚಾರ ಎಂದರು.
ಇದೇ ಸಂದರ್ಭ ಪರಿಸರಸ್ನೇಹಿ ವಸ್ತುಗಳನ್ನು ಬಿಡುಗಡೆ ಮಾಡಲಾಯಿತು. ಯೋಗ ಪ್ರದರ್ಶನದಲ್ಲಿ ಉತ್ತಮ ಸಾಧನೆ ತೋರಿದ ಆಳ್ವಾಸ್ ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿಗಳಾದ ವಿನಯಾ, ಸ್ವಾಸ್ತಿ ರೈ, ಶ್ರುತಿ ರಾವ್, ಅಮೃತಾ ಹಾಗೂ ಚೈತ್ರಾ ಶೆಟ್ಟಿಯವರನ್ನು ಅಭಿನಂದಿಸಲಾಯಿತು. ಬಳಿಕ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿಯವರಿಂದ ಹಾಗೂ ಅವರ ಶಿಷ್ಯರಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು. ಸಮಾರಂಭದಲ್ಲಿ ಶಾಸಕ ಭರತ್ ಶೆಟ್ಟಿ, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಕೃಷ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯ ಅಧಿಕಾರಿ ರಘುವೀರ ಸೂಟರ್‌ಪೇಟೆ, ಹೋಂಗಾರ್ಡ್ ದ.ಕ. ಜಿಲ್ಲಾ ಕಮಾಂಡೆಂಟ್ ಡಾ.ಮುರಳಿಮೋಹನ ಚೂಂತಾರು, ವಿವಿಧ ಕಾಲೇಜುಗಳ ಪ್ರತಿನಿಧಿಗಳಾದ ಸಂತೋಷ್, ಡಾ.ಪ್ರವೀಣ್ ಕುಮಾರ್, ವಿವೇಕ್, ಆಯುಷ್ ಸಂಘಟನೆಯ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಸ್ವಾಗತಿಸಿ, ವಂದಿಸಿದರು.

 

Leave a Comment