ಮುಂದಿನ ಚುನಾವಣೆಗೆ ಕಾಂಗ್ರೆಸ್‌ನಿಂದಲೇ ಸ್ಪರ್ಧೆ:ಕೆಎನ್ಆರ್

ಮಧುಗಿರಿ, ಮೇ ೩೧- ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ. ಮುಂದಿನ ಚುನಾವಣೆಯಲ್ಲೂ ಮಧುಗಿರಿ ಕ್ಷೇತ್ರದಿಂದ ನಾನೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಸ್ಪಷ್ಟಪಡಿಸಿದರು.

ಪಟ್ಟಣದ ಎಂ.ಎನ್.ಕೆ ಸಮುದಾಯ ಭವನದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣದ ನಿಮಿತ್ತ ಮಧುಗಿರಿ ತಾಲ್ಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಗ್ರಾ.ಪಂ. ಅಧ್ಯಕ್ಷರುಗಳ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಡವರ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಏಳ್ಗೆಗೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಪಕ್ಷದಲ್ಲಿ ನಾಯಕರಲ್ಲಿ ವಿಚಾರ ಬೇದವಿರಬಹುದು. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಎದುರಿಸಿ ಒಗ್ಗಟ್ಟಿನಿಂದ ಕೆಲಸ ಮಾಡಿದಲ್ಲಿ ಮತ್ತೆ ಅಧಿಕಾರ ಹಿಡಿಯಬಹುದು. ಕಾರ್ಯಕರ್ತರು ಗೊಂದಲಕ್ಕೊಳಗಾಗುವುದು ಬೇಡ ಮುಂಬರುವ ಚುನಾವಣೆಯಲ್ಲೂ ನಾನೇ ಪಕ್ಷದ ಅಭ್ಯರ್ಥಿ ಎಂದರು.

ಗ್ರಾ.ಪಂ.ಗಳ ಅವಧಿ ಮುಗಿದಿದ್ದು, ಬಿಜೆಪಿ ಸರ್ಕಾರ ನಾಮನಿರ್ದೇಶನ ಮಾಡಲು ಹೊರಟಿದ್ದು ಡಿ.ಕೆ.ಶಿವಕುಮಾರ್ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನನ್ನ ಸಹಮತವಿದೆ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸ್ಥಳೀಯ ಮುಖಂಡರಿಗೆ ಅಧಿಕಾರ ಕೊಡಿಸಲು ಹಿರಿಯ ನಾಯಕರು ಸಹಾಯ ಮಾಡಬೇಕು. ಸಿದ್ದರಾಮಯ್ಯ ಅವಧಿಯ ಜನಪರ ಕಾರ್ಯಕ್ರಮಗಳ ಬಗ್ಗೆ ಗ್ರಾಮೀಣ ಜನರಿಗೆ ಮನವರಿಕೆ ಮಾಡಿಕೊಟ್ಟು ಕಾಂಗ್ರೆಸ್ ಪಕ್ಷದ ಪರ ಮತಯಾಚನೆ ಮಾಡಬೇಕು ಎಂದರು.

ಕೆಪಿಸಿಸಿ ವೀಕ್ಷಕ ಶ್ರೀನಾಥ್ ಮಾತನಾಡಿ, ಕ್ಷೇತ್ರದ ಜನರಿಗಾಗಿ ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ ಕೆ.ಎನ್. ರಾಜಣ್ಣ ರವರನ್ನು ಚುನಾವಣೆಯಲ್ಲಿ ಪರಾಭವಗೊಳಿಸಿದ್ದು ದುರದೃಷ್ಟಕರ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಪಕ್ಷ ಬಲಿಷ್ಟವಾಗಿ ಸುಮಾರು 180 ಶಾಸಕರು ಆಯ್ಕೆಯಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡ ವಾಲೇಚಂದ್ರು ಮಾತನಾಡಿ, ನನಗೆ ಮೊದಲಿನಿಂದಲೂ ರಾಜಣ್ಣನವರ ಜತೆ ಒಡನಾಟವಿದೆ. ಅವರು ಜಿಲ್ಲೆಯಲ್ಲಿಯೇ ಅತ್ಯಧಿಕವಾಗಿ ದೀನದಲಿತರ ಪರವಾದಂತಹ ಕಾರ್ಯಕ್ರಮಗಳು ಹಾಗೂ ಕೋವಿಡ್-19 ಸಂದರ್ಭದಲ್ಲಿ ಬಡವರಿಗೆ ಅನ್ನದಾನ ಕಾರ್ಯಕ್ರಮ ಆಯೋಜಿಸುವುದರ ಮೂಲಕ ಜಿಲ್ಲೆಯ ಜನ ನಾಯಕರಾಗಿದ್ದಾರೆ ಎಂದರು.
ನಾನು ಯಾವತ್ತೂ ಅಧಿಕಾರದ ದಾಹಕ್ಕಾಗಿ ಕೆಲಸ ಮಾಡಿದವನಲ್ಲ. ಜನರ ಪ್ರೀತಿ ವಿಶ್ವಾಸಕ್ಕಾಗಿ ಕೆಲಸ ಮಾಡಿದವನು.

ಪ್ರಸ್ತುತ ಇಡೀ ದೇಶದಲ್ಲೇ ಡಿಸಿಸಿ ಬ್ಯಾಂಕ್ ಮಾದರಿಯಾಗಿ ಕೆಲಸ ಮಾಡುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಮತ್ತು ಹಿಂದಿನ ಸರ್ಕಾರದ ಅವಧಿಯಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ತಾಲ್ಲೂಕಿನ ರೈತರ 164 ಕೋಟಿ ಸಾಲ ಮನ್ನಾ ಮಾಡಲಾಗಿದೆ. ಬ್ಯಾಂಕಿನಲ್ಲಿ ಸಾಲ ಪಡೆದು ಮೃತಪಟ್ಟ ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡಲಾಗುತ್ತಿದ್ದು, ಇದಕ್ಕಾಗಿ ಸುಮಾರು 9 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ತಿಳಿಸಿದರು.

ಸಭೆಯಲ್ಲಿ ಕೆಪಿಸಿಸಿ ವೀಕ್ಷಕ ಆಶೋಕ್ ಕುಮಾರ್, ನರಸೀಯಪ್ಪ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ, ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್.ಗಂಗಣ್ಣ, ಜಿ.ಪಂ. ಸದಸ್ಯರಾದ ಜಿ.ಜೆ.ರಾಜಣ್ಣ, ಚೌಡಪ್ಪ, ತಾ.ಪಂ. ಅಧ್ಯಕ್ಷೆ ಇಂದಿರಾದೇನಾನಾಯ್ಕ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಸದಸ್ಯರಾದ ಲಾಲಪೇಟೆ ಮಂಜುನಾಥ್, ಮಂಜುನಾಥ್ ಆಚಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್.ರಾಜಗೋಪಾಲ್, ಎಂ.ಎಸ್.ಮಲ್ಲಿಕಾರ್ಜುನಯ್ಯ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಕುಮಾರ್, ಹುಲಿಕುಂಟೆಮಠ್ ಮುಖಂಡರಾದ ಆದಿನಾರಾಯಣರೆಡ್ಡಿ, ಎಂ.ಎಸ್.ಶಂಕರನಾರಾಯಣ, ಎಸ್.ಬಿ.ಟಿ ರಾಮು, ಸಾಧಿಕ್, ತಲ್ಲಿ ಮಂಜಣ್ಣ ಮತ್ತಿತರರು ಉಪಸ್ಥಿತರಿದ್ದರು.
31tum18

Share

Leave a Comment