ಮುಂದಿನ 5 ದಿನ ರಾಜ್ಯದಲ್ಲಿ ಮತ್ತೆ ಮಳೆ

ನವದೆಹಲಿ, ಸೆ. ೧೨- ಇಂದಿನಿಂದ 5 ದಿನಗಳ ಕಾಲ ಕರ್ನಾಟಕ ಮತ್ತು ಭಾರತದ ಪೂರ್ವ ಭಾಗದಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕ ಮತ್ತು ಮಲೆನಾಡು ಪ್ರದೇಶಗಳಲ್ಲಿ ವರುಣನ ಅಬ್ಬರದಿಂದಾಗಿ ಅಪಾರ ಹಾನಿ ಸಂಭವಿಸಿದೆ. ಇದರ ಬೆನ್ನಲ್ಲೆ ಹವಾಮಾನ ಇಲಾಖೆ ರಾಜ್ಯದಲ್ಲೂ ಮಳೆ ಬೀಳುವ ಮುನ್ಸೂಚನೆ ನೀಡಿರುವುದು ಜನರಲ್ಲಿ ಇನ್ನಷ್ಟು ಆತಂಕ ಮೂಡಿಸಿದೆ.
ರಾಜ್ಯದ ಕರಾವಳಿ ತೀರದ ಪ್ರದೇಶದಲ್ಲಿ ಅಧಿಕ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಸಿಕ್ಕಿಂನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಪೂರ್ವ ಉತ್ತರ ಪ್ರದೇಶ, ಪೂರ್ವ ರಾಜಸ್ತಾನ, ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳಲ್ಲೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಸ್ಸಾಂ, ಮೇಘಾಲಯ, ಗುಜರಾತ್, ಅರುಣಾಚಲ ಪ್ರದೇಶ, ಮಧ್ಯಪ್ರದೇಶ, ಕೊಂಕಣ ಹಾಗೂ ಗೋವಾ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಮಿಂಚು-ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗಲಿದ್ದು, ಮುಂದಿನ ಕೆಲ ದಿನಗಳ ಕಾಲ ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್, ಚಂಡೀಘಡ, ಹರಿಯಾಣ, ದೆಹಲಿ ಮತ್ತು ರಾಜಸ್ತಾನದಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ.

Leave a Comment